ಉಪಚುನಾವಣೆ | ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ಗೆ ಗೆಲುವು
ಯಾಸಿರ್ ಖಾನ್ ಪಠಾಣ್
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದ್ದ ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅಚ್ಚರಿಯ ರೀತಿಯಲ್ಲಿ ಜಯ ಗಳಿಸಿದ್ದು, ಎಲ್ಲರನ್ನು ಹುಬ್ಬೇರಿಸುವಂತೆ ಮಾಡಿದ್ದಾರೆ.
ನಾಲ್ಕು ಅವಧಿಗೆ ಬಿಜೆಪಿ ತೆಕ್ಕೆಯಲ್ಲಿದ್ದ ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬಾವುಟ ಹಾರಿಸಿದ್ದು, ನಿಜಕ್ಕೂ ಕಾಂಗ್ರೆಸ್ ನಾಯಕರ ಸಾಧನೆಯೇ ಸರಿ. ಮೂವತ್ತು ವರ್ಷಗಳ ಬಳಿಕ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪಠಾಣ್ 1,00,756 ಮತಗಳನ್ನು ಗಳಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ(87,308) ಅವರನ್ನು 13,448 ಮತಗಳ ಭಾರೀ ಅಂತರದಿಂದ ಸೋಲಿಸಿದ್ದಾರೆ.
ಮತ ಎಣಿಕೆ ಆರಂಭದಲ್ಲಿ ಭರತ್ ಬೊಮ್ಮಾಯಿ ಮುನ್ನಡೆ ಕಾಯ್ದುಕೊಂಡಿದ್ದರಾದರೂ, ಅಂತಿಮವಾಗಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅಚ್ಚರಿಯ ರೀತಿಯಲ್ಲಿ ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಕೊನೆಯ ಕ್ಷಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮಾಡಿದ್ದು ಗೊಂದಲ ಸೃಷ್ಟಿಸಿತ್ತು. ಆದರೂ, ಪಕ್ಷದ ನಾಯಕರ ಒಗ್ಗಟ್ಟಿನ ಪ್ರಯತ್ನದಿಂದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಸತೀಶ್ ತಂತ್ರಕ್ಕೆ ಫಲ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಾಲ್ಕು ತಿಂಗಳಿಂದ ಕ್ಷೇತ್ರದಲ್ಲೇ ಬೀಡುಬಿಟ್ಟು ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸುವ ನಿಟ್ಟಿನಲ್ಲಿ ಹೆಣೆದ ರಣತಂತ್ರ ಫಲ ನೀಡಿದ್ದು, ಯಾಸೀರ್ ಅಹ್ಮದ್ ಖಾನ್ ಪಠಾಣ್ ನಿರೀಕ್ಷೆ ಮೀರಿ ಜಯ ಗಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುತ್ತಿದ್ದ ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷವು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.
ಭಾವೈಕ್ಯತೆಗೆ ಗೆಲುವು: ‘ಅಲ್ಪಸಂಖ್ಯಾತ ಸಮುದಾಯದ ಸಾಮಾನ್ಯ ಕುಟುಂಬದಿಂದ ಬಂದ ನನ್ನನ್ನು ಶಿಗ್ಗಾಂವಿ ಕ್ಷೇತ್ರದ ಜನತೆ ಭರ್ಜರಿ ಮತಗಳಿಂದ ಗೆಲ್ಲಿಸಿದ್ದು, ಆ ಮೂಲಕ ಕ್ಷೇತ್ರದ ಜನತೆ ಇಡೀ ದೇಶಕ್ಕೆ ಭಾವೈಕ್ಯತೆಯೆ ಸಂದೇಶವನ್ನು ನೀಡಿದ್ದಾರೆ’ ಎಂದು ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ತಿಳಿಸಿದ್ದಾರೆ.
‘ಕ್ಷೇತ್ರದ ಜನತೆ ನನಗೆ ತಮ್ಮ ಸೇವೆ ಮಾಡಲು ಅವಕಾಶ ಕಲ್ಪಿಸಿದ್ದು, ಕ್ಷೇತ್ರದಲ್ಲಿ ಶಿಕ್ಷಣ, ಆರೋಗ್ಯ, ಉದ್ಯೋಗದ ಸಮಸ್ಯೆ ಬಗೆಹರಿಸಲು ಕೆಲಸ ಮಾಡಲಿದ್ದೇನೆ. ನನ್ನ ಗೆಲುವಿಗೆ ಶ್ರಮಿಸಿದ ಸಚಿವರಾದ ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ಮುಖಂಡರಿಗೆ, ಕಾರ್ಯಕರ್ತರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ’ ಎಂದು ಯಾಸೀರ್ ಅಹ್ಮದ್ ಖಾನ್ ಪಠಾಣ್ ಹೇಳಿದರು.