ಉಪ ಚುನಾವಣೆ ಬಳಿಕ ಕಾಂಗ್ರೆಸ್ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಷ್ಟವಾಗಲಿದೆ : ಬಿ.ವೈ.ವಿಜಯೇಂದ್ರ
ಬೆಂಗಳೂರು: ಉಪ ಚುನಾವಣೆ ನಡೆಯುತ್ತಿರುವ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರಿನಲ್ಲಿ ಯಾವ ರೀತಿ ಆಡಳಿತ ವಿರೋಧಿ ಅಲೆ ಇದೆ ಎಂಬುದು ಜಗಜ್ಜಾಹೀರಾಗಿದೆ. ರಾಜ್ಯ ಸರಕಾರದ ವಿರುದ್ಧ ಜನ ಹಿಡಿಶಾಪ ಹಾಕುತ್ತಿದ್ದಾರೆ. ಈ ಉಪ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳುವುದು ಕಷ್ಟವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಶನಿವಾರ ನಗರದ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ವಿರುದ್ಧ ಕಾಂಗ್ರೆಸ್ ಶಾಸಕರು ಈಗಾಗಲೆ ಬೊಬ್ಬೆ ಹೊಡೆಯುತ್ತಿದ್ದಾರೆ. ಅಭಿವೃದ್ಧಿಗೆ ಹಣ ಕೊಡದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ರಾಜು ಕಾಗೆ ಹೇಳಿದ್ದನ್ನು ಉಲ್ಲೇಖಿಸಿದರು.
ಎಂಟು ಬಾರಿ ಶಾಸಕರಾಗಿರುವ ಆರ್.ವಿ.ದೇಶಪಾಂಡೆ ಕೂಡ ಸರಕಾರದಿಂದ ಅನುದಾನ ಸಿಗುತ್ತಿಲ್ಲ ಎಂದು ಹೇಳಿದ್ದಾರೆ. ಮತ್ತೊಂದೆಡೆ ಮುಖ್ಯಮಂತ್ರಿಯ ಸಲಹೆಗಾರ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಅಧಿಕಾರಿಗಳು ನಮ್ಮ ಮಾತು ಕೇಳುತ್ತಿಲ್ಲ ಎಂದಿದ್ದಾರೆ ಎಂದು ವಿಜಯೇಂದ್ರ ವಿವರಿಸಿದರು.
ರಾಜ್ಯದಲ್ಲಿ ಮಳೆ ಹೆಚ್ಚಾಗಿ ನೆರೆ ಪರಿಸ್ಥಿತಿ ತೀವ್ರವಾಗಿದೆ. ರೈತರ ಬೆಳೆ ಸಂಪೂರ್ಣ ನಾಶವಾಗಿದೆ. ಭತ್ತ, ಜೋಳ, ಹತ್ತಿ, ಶೇಂಗಾ, ಈರುಳ್ಳಿ ಬೆಳೆ ನಷ್ಟದಿಂದ ರೈತರು ಸಂಕಷ್ಟದಲ್ಲಿದ್ದಾರೆ. 3 ಉಪ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಿಗೆ ಸರಕಾರವು ಸಂಡೂರಿಗೆ 10 ಸಚಿವರು, ಶಿಗ್ಗಾವಿಗೆ 10 ಸಚಿವರು ಮತ್ತು ಚನ್ನಪಟ್ಟಣದಲ್ಲಿ 10 ಸಚಿವರನ್ನು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 20-30 ಜನ ಶಾಸಕರನ್ನು ನೇಮಿಸಿದೆ. ಹಣದ ಮೂಟೆ ಇಟ್ಟುಕೊಂಡು ಉಪ ಚುನಾವಣೆ ಎದುರಿಸಲು ಸಜ್ಜಾಗುತ್ತಿದ್ದಾರೆಯೇ ಹೊರತು ಮುಖ್ಯಮಂತ್ರಿಗೆ, ರಾಜ್ಯ ಸರಕಾರಕ್ಕೆ ರೈತರ ಸಂಕಷ್ಟ ಕಣ್ಣಿಗೆ ಕಾಣುತ್ತಿಲ್ಲ ಎಂದು ಅವರು ದೂರಿದರು.
ವಕ್ಫ್ ಕಾಯಿದೆ ಹೆಸರಿನಲ್ಲಿ ರೈತರನ್ನು ಬೀದಿಪಾಲು ಮಾಡಬೇಡಿ
ವಕ್ಫ್ ಕಾಯಿದೆ ಹೆಸರು ಹೇಳಿಕೊಂಡು ರೈತರು ಬೀದಿಪಾಲಾಗಬಾರದು. ಆ ನಿಟ್ಟಿನಲ್ಲಿ ಸರಕಾರ ಎಚ್ಚರಿಕೆ ವಹಿಸಬೇಕು. ರೈತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಬಿಜೆಪಿ ಯಾವ ಹಂತಕ್ಕೆ ಹೋಗಲೂ ಸಿದ್ಧವಿದೆ. ವಕ್ಫ್ ಕಾಯಿದೆ ಹೆಸರಿನಲ್ಲಿ ರೈತರ ಜಮೀನನ್ನು ಹೊಡೆದುಕೊಳ್ಳುವ ಹುನ್ನಾರವೂ ನಡೆಯುತ್ತಿದೆ. ವಿಜಯಪುರದಲ್ಲಿ ರೈತರು ಹಲವಾರು ದಶಕಗಳಿಂದ ಕೃಷಿ ಮಾಡುತ್ತಿದ್ದ ಜಮೀನು ಕೂಡ ವಕ್ಫ್ ಆಸ್ತಿ ಎಂದು ಅಧಿಕಾರಿಗಳ ಮೂಲಕ ನೋಟಿಸ್ ನೀಡುತ್ತಿದ್ದಾರೆ.
ಬಿ.ವೈ.ವಿ.ಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ