ಕೋವಿಡ್ ನಿಯಮ ಉಲ್ಲಂಘನೆ | ಸಿಎಂ, ಡಿಸಿಎಂ ಸೇರಿ ಕಾಂಗ್ರೆಸ್ ನಾಯಕರ ವಿರುದ್ಧದ ಕೇಸ್ ವಾಪಸ್
ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಬೆಂಗಳೂರು, ಆ.10: ರಾಮನಗರದ ಮೇಕೆದಾಟು ಬಳಿಯಿಂದ ಬೆಂಗಳೂರಿನವರೆಗೆ ಆಯೋಜಿಸಿದ್ದ ‘ನಮ್ಮ ನೀರು, ನಮ್ಮ ಹಕ್ಕು’ ಪಾದಯಾತ್ರೆ ವೇಳೆ, ಕೋವಿಡ್ ಮಾರ್ಗಸೂಚಿಗಳು ಹಾಗೂ ಸೆಕ್ಷನ್ 144 ಉಲ್ಲಂಘನೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಇನ್ನಿತರ ಕಾಂಗ್ರೆಸ್ ನಾಯಕರ ವಿರುದ್ಧ ದಾಖಲಾಗಿದ್ದ 9 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಗಳು ಹಾಗೂ ಸೆಕ್ಷನ್ 144 ಉಲ್ಲಂಘನೆಗೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 9 ಕ್ರಿಮಿನಲ್ ಪ್ರಕರಣಗಳನ್ನು ಅಭಿಯೋಜನೆಯಿಂದ ಕೈ ಬಿಡಲು ನಿರ್ಧರಿಸಲಾಗಿದೆ ಎಂದರು.
ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್ ನೀಡಿರುವ ಅರ್ಜಿಯನ್ನು ಆಧರಿಸಿ ಸಚಿವ ಸಂಪುಟ ಈ ನಿರ್ಣಯ ಕೈಗೊಂಡಿದೆ. ಮೇಕೆದಾಟು ಪಾದಯಾತ್ರೆ ವೇಳೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಇನ್ನಿತರ ಕಾಂಗ್ರೆಸ್ ಮುಖಂಡರ ಮೇಲೆ ಇದ್ದ ಪ್ರಕರಣಗಳು ಇದಾಗಿವೆ ಎಂದು ಅವರು ಮಾಹಿತಿ ನೀಡಿದರು.
ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ(ಅಂದಿನ ವಿಪಕ್ಷ ನಾಯಕ), ಸಂಸದ ಡಿ.ಕೆ.ಸುರೇಶ್ ಮೇಕೆದಾಟು ಬಳಿ ಸಮಾನಾಂತರ ಜಲಾಶಯ ನಿರ್ಮಾಣಕ್ಕಾಗಿ ಆಗ್ರಹಿಸಿ ಕಳೆದ ಸಾಲಿನ ಜ.9ರಂದು ‘ನಮ್ಮ ನೀರು, ನಮ್ಮ ಹಕ್ಕು’ ಪಾದಯಾತ್ರೆ ಆಯೋಜಿಸಿದ್ದರು.
ಈ ವೇಳೆ ಸರಕಾರ ಕೋವಿಡ್ ಮಾರ್ಗಸೂಚಿಗಳನ್ನು ಹೊರಡಿಸಿ, ಸೆಕ್ಷನ್ 144 ಹೇರಿದ್ದರೂ ಅದನ್ನು ಉಲ್ಲಂಘಿಸಿ ಪಾದಯಾತ್ರೆ ನಡೆಸಲಾಗಿತ್ತು. ಈ ಸಂಬಂಧ ರಾಮನಗರ ತಹಶೀಲ್ದಾರ್ ನೀಡಿದ್ದ ದೂರಿನ ಆಧಾರದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಂಭತ್ತು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು.
ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದರಿಂದ ರಾಜ್ಯ ಸರಕಾರವು ಜನರ ಓಡಾಟವನ್ನು ನಿರ್ಬಂಧಿಸಿ ಸೆಕ್ಷನ್ 144 ಹೇರಿತ್ತು. ಆದರೂ, ಪಾದಯಾತ್ರೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿರುವುದನ್ನು ಗಮನಿಸಿ ರಾಜ್ಯ ಹೈಕೋರ್ಟ್ ನೀಡಿದ್ದ ಎಚ್ಚರಿಕೆಯಿಂದಾಗಿ ಕಾಂಗ್ರೆಸ್ ನಾಯಕರು ಪಾದಯಾತ್ರೆಯನ್ನು ಅರ್ಧಕ್ಕೆ ನಿಲ್ಲಿಸಿದ್ದರು.
ಆನಂತರ ಫೆಬ್ರವರಿ ತಿಂಗಳಲ್ಲಿ ಪುನಃ ಪಾದಯಾತ್ರೆ ಆರಂಭಿಸಿದ ಕಾಂಗ್ರೆಸ್ ಪಕ್ಷವು, ಮಾ.3ರಂದು ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಪಾದಯಾತ್ರೆಯನ್ನು ಅಂತ್ಯಗೊಳಿಸಿತ್ತು. ಕಾಂಗ್ರೆಸ್ ಆಯೋಜಿಸಿದ್ದ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಅನೇಕ ಮುಖಂಡರಿಗೆ ಕೋವಿಡ್ ಸೋಂಕು ತಗುಲಿತ್ತು.