ಜಾತಿ ಗಣತಿ ವರದಿ ಕುರಿತ ಚರ್ಚೆ ಅಪೂರ್ಣ ; ಲಿಖಿತವಾಗಿ ಆಕ್ಷೇಪಣೆಗಳು ಸಲ್ಲಿಸುವಂತೆ ಸಿಎಂ ಸೂಚನೆ?
ಮೇ 2ರಂದು ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ: ಎಚ್.ಕೆ.ಪಾಟೀಲ್
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ‘ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ’(ಜಾತಿ ಗಣತಿ) 2015ರ ದತ್ತಾಂಶಗಳ ಅಧ್ಯಯನ ವರದಿಯ ಕುರಿತು ಚರ್ಚಿಸಲು ಕರೆಯಲಾಗಿದ್ದ ಮಹತ್ವದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಅಪೂರ್ಣವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ಮೇ 2ರಂದು ನಡೆಯುಲಿರುವ ಸಂಪುಟ ಸಭೆಯಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಸುದೀರ್ಘವಾಗಿ ಈ ವರದಿಯ ಕುರಿತು ಸೌಹಾರ್ದಯುತವಾಗಿ ಚರ್ಚೆ ಮಾಡಿದ್ದೇವೆ. ಇನ್ನೂ ಹೆಚ್ಚಿನ ಮಾಹಿತಿ, ತಾಂತ್ರಿಕ ವಿವರಗಳು ಚರ್ಚೆಗೆ ಅವಶ್ಯಕ ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜನಸಂಖ್ಯೆ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವಿಕೆ, ಸಮೀಕ್ಷೆಗೆ ಬಳಸಲಾಗಿರುವ ಮಾನದಂಡಗಳು ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.
ಈ ಸಮೀಕ್ಷೆಯಲ್ಲಿ ಶೇ.94.17ರಷ್ಟು ಜನಸಂಖ್ಯೆ ಭಾಗಿಯಾಗಿದೆ. ಸಚಿವ ಸಂಪುಟ ಸಭೆಯಲ್ಲಿ ವರದಿಯು ಮಂಡನೆಯಾಗಿದ್ದು, ಚರ್ಚೆಗೆ ಕೈಗೆತ್ತಿಕೊಳ್ಳಲಾಗಿದೆ. ಎ.24ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲೆ ಈ ವಿಚಾರವನ್ನು ಚರ್ಚಿಸಲು ಉದ್ದೇಶಿಸಲಾಗಿತ್ತು. ಆದರೆ, ಅಲ್ಲಿನ ಸ್ಥಳೀಯ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಮೇ 2ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ವರದಿ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಯಾವ ಸಚಿವರು ವಿರೋಧ ಮಾಡಿಲ್ಲ: ಸಮುದಾಯಗಳ ಜನಸಂಖ್ಯೆಯ ಪ್ರಮಾಣದ ಬಗ್ಗೆ ಈಗಾಗಲೇ ಮಾಧ್ಯಮಗಳಲ್ಲೆ ವರದಿಗಳನ್ನು ಪ್ರಕಟ ಮಾಡಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ವರದಿಯನ್ನು ಯಾವ ಸಚಿವರು ವಿರೋಧ ಮಾಡಿಲ್ಲ ಎಂದು ಎಚ್.ಕೆ.ಪಾಟೀಲ್ ಹೇಳಿದರು.
ಲಿಖಿತವಾಗಿ ಆಕ್ಷೇಪಣೆಗಳು ಸಲ್ಲಿಸುವಂತೆ ಸಿಎಂ ಸೂಚನೆ?: ಜಾತಿ ಗಣತಿ ವರದಿ ಕುರಿತು ಏನೇ ಆಕ್ಷೇಪಣೆಗಳು ಇದ್ದರೂ ಅದನ್ನು ಲಿಖಿತವಾಗಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸಂಪುಟ ಸಭೆ ಆರಂಭಕ್ಕೂ ಮುನ್ನ ಮುಖ್ಯಮಂತ್ರಿಯನ್ನು ಅವರ ಕಚೇರಿಯಲ್ಲಿ ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯದ ಸಚಿವರು ಪ್ರತ್ಯೇಕವಾಗಿ ಭೇಟಿ ಮಾಡಿ, ತಮ್ಮ ಸಮುದಾಯಗಳು ಈ ವರದಿ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆಯೂ ಮುಖ್ಯಮಂತ್ರಿಯ ಗಮನ ಸೆಳೆದರು ಎನ್ನಲಾಗಿದೆ.
ಸಚಿವ ಸಂಪುಟ ಸಭೆ ಆರಂಭಗೊಳ್ಳುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಯೊಬ್ಬ ಸಚಿವರಿಂದ ವೈಯಕ್ತಿಕ ಅಭಿಪ್ರಾಯ ಸಂಗ್ರಹಿಸಲು ಮುಂದಾದರು. ಈ ಸಂದರ್ಭದಲ್ಲಿ ದಲಿತ ಸಮುದಾಯದ ಸಚಿವರು ಜಾತಿ ಗಣತಿ ವರದಿ ಅನುಷ್ಠಾನ ಮಾಡಬೇಕು. ಅದು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆ ಎಂದು ಹೇಳಿದ್ದಾರೆ. ಇದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.