ಕಾವೇರಿ ಜಲ ವಿವಾದ: ಕೇಂದ್ರ ಜಲಸಂಪನ್ಮೂಲ ಸಚಿವರಿಗೆ ಸಿಎಂ ಪತ್ರ
ಬೆಂಗಳೂರು, ಸೆ. 13: ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ಕೆಆರ್ ಎಸ್ ಹಾಗೂ ಕಬಿನಿ ಜಲಾಶಯದಿಂದ ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ನೀಡಿರುವ ಆದೇಶವು ರೈತರ ಹಿತಾಸಕ್ತಿಯನ್ನು ಕಾಪಾಡಿಕೊಂಡು ಅನುಷ್ಠಾನಗೊಳಿಸಲು ವಾಸ್ತವಿಕ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಸಂಬಂಧ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಪತ್ರ ಬರೆದಿರುವ ಅವರು, ಕೃಷಿ ಚಟುವಟಿಕೆಗಳಿಗೆ ರೈತರು ಹಾಗೂ ಕುಡಿಯಲು ಜನ, ಜಾನುವಾರುಗಳು ಕಾವೇರಿ ನದಿ ನೀರನ್ನು ಅವಲಂಬಿಸಿದ್ದಾರೆ. ಅವರ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ಈ ಆದೇಶವನ್ನು ಕಾರ್ಯಗತಗೊಳಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಆದುದರಿಂದ, ರಾಜ್ಯದ ಮನವಿಯನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ವರ್ಗಾಯಿಸಿ, ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ಪುನರ್ ಪರಿಶೀಲಿಸಲು ಸೂಚಿಸಬೇಕು ಎಂದು ಕೋರಿರುವ ಮುಖ್ಯಮಂತ್ರಿ, ಇದು ಸಂಕಷ್ಟದ ವರ್ಷವಾಗಿರುವುದರಿಂದ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ಸ್ ನೀರು ಹರಿಸುವುದು ರೈತರು ಹಾಗೂ ಜನರ ಮೇಲೆ ಭಾರಿ ಹೊರೆಯಾಗಲಿದೆ ಎಂದು ಹೇಳಿದ್ದಾರೆ.