ಕಾವೇರಿದ ಕಾವೇರಿ ಹೋರಾಟ | ಮದ್ದೂರಿನಲ್ಲಿ ರೈತರ ಪ್ರತಿಭಟನೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಭಾಗಿ
ಮಂಡ್ಯ, ಸೆ.23: ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮಂಡ್ಯ ಹಾಗೂ ಮದ್ದೂರು ತಾಲೂಕಿನಾದ್ಯಂತ ಹೋರಾಟ ತೀವ್ರ ಸ್ವರೂಪ ಪಡೆಯುತ್ತಿದೆ. ಇಂದು ವಿವಿಧ ಸಂಘಟನೆಗಳು ಬಂದ್ ಗೆ ಕರೆಕೊಟ್ಟಿದ್ದು, ಇದೀಗ ಈ ಹೋರಾಟಕ್ಕೆ ಕಾಲೇಜು ವಿದ್ಯಾರ್ಥಿಗಳು ಕೂಡ ಬೆಂಬಲ ಸೂಚಿಸಿದ್ದಾರೆ.
ಮದ್ದೂರು ಪಟ್ಟಣದ ಎಚ್.ಕೆ.ವೀರಣ್ಣಗೌಡ ಕಾಲೇಜು, ಸರಕಾರಿ ಮಹಿಳಾ ಕಾಲೇಜು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಮೆರವಣಿಗೆ ನಡೆಸಿದರು. ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.
ಬೆಳಿಗ್ಗೆಯಿಂದಲೇ ರೈತಪರ ಸಂಘಟನೆಗಳು, ವಿವಿಧ ಕನ್ನಡ ಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳ ಜೊತೆಗೆ ವಿದ್ಯಾರ್ಥಿಗಳು ಕಾವೇರಿ ಪರ ಹೋರಾಟಕ್ಕೆ ಬೆಂಬಲ ಸೂಚಿಸಿ ಧರಣಿಯಲ್ಲಿ ಭಾಗಿಯಾಗಿದ್ದಾರೆ. ಪ್ರವಾಸಿ ಮಂದಿರ ವೃತ್ತದಲ್ಲಿ ಬೃಹತ್ ಮಾನವ ಸರಪಳಿ ಮೂಲಕ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು. ಮದ್ದೂರು ಪಟ್ಟಣ ಇಂದು ಸಂಪೂರ್ಣ ಬಂದ್ ಆಗಿದ್ದು, ಸಾರ್ವಜನಿಕರು ಕೂಡ ಬಂದ್ ಗೆ ಬೆಂಬಲ ಸೂಚಿಸಿದ್ದಾರೆ.