ಚಂದ್ರಯಾನ-3ರ ಅಪಹಾಸ್ಯ ಆರೋಪ: ಉಪನ್ಯಾಸಕ ಹುಲಿಕುಂಟೆ ಮೂರ್ತಿಗೆ ಡಿಡಿಪಿಯು ನೋಟಿಸ್
ಬೆಂಗಳೂರು, ಜು.20: ಚಂದ್ರಯಾನ-3 ರ ಕುರಿತು ಅಪಹಾಸ್ಯ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಆರೋಪದಲ್ಲಿ ಉಪನ್ಯಾಸಕ, ಕವಿ ಹುಲಿಕುಂಟೆ ಮೂರ್ತಿಯವರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ (DDPU) ನೋಟಿಸ್ ಜಾರಿ ಮಾಡಿದೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾಗಿರುವ ಹುಲಿಕುಂಟೆ ಮೂರ್ತಿ ‘ಚಂದ್ರಯಾನ ಈ ಸಲ ತಿರುಪತಿ ನಾಮವೇ ಗತಿ ಅನ್ಸುತ್ತೆ...’ ಎಂದು ಫೇಸ್ ಬುಕ್ ಪೋಸ್ಟ್ ಹಾಕಿದ್ದರೆನ್ನಲಾಗಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದು ತೀವ್ರ ಟೀಕೆಗೆ ಗುರಿಯಾಗಿತ್ತು. ಈ ವಿಚಾರವಾಗಿ ಮಾಜಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದು, ಸಂಬಂಧಪಟ್ಟ ಉಪನ್ಯಾಸಕರಿಂದ ಸ್ಪಷ್ಟೀಕರಣ ಕೇಳುವಂತೆ ಕೋರಿದ್ದರು.
ಈ ಹಿನ್ನೆಲೆಯಲ್ಲಿ ಇಲಾಖೆ ನಿರ್ದೇಶಕರ ನಿರ್ದೇಶನದ ಮೇರೆಗೆ ಹುಲಿಕುಂಟೆ ಮೂರ್ತಿಯವರಿಗೆ ಪಿಯು ಶಿಕ್ಷಣ ಇಲಾಖೆಯ ಉಪನಿರ್ದೇಶಕರು ನೋಟಿಸ್ ಜಾರಿ ಮಾಡಿದ್ದಾರೆ. ಫೇಸ್ ಬುಕ್ ಪೋಸ್ಟ್ ಕುರಿತಂತೆ ತುರ್ತಾಗಿ ಸ್ಪಷ್ಟೀಕರಣ ನೀಡುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ.
ಚಂದ್ರಯಾನ-3 ಉಡಾವಣೆಗೂ ಮುನ್ನ ಇಸ್ರೋ ವಿಜ್ಞಾನಿಗಳು ತಿರುಪತಿಯಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಪರ-ವಿರೋಧ ಚರ್ಚೆಗೆ ಕಾರಣವಾಗಿತ್ತು.