ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್ ಬಚ್ಚೇಗೌಡ
ಕೇಂದ್ರ ಸರಕಾರದ ವಿರುದ್ಧವೇ ವಾಗ್ದಾಳಿ
ಚಿಕ್ಕಬಳ್ಳಾಪುರ, ಆ. 22: ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಮಂಗಳವಾರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಅವರು ಚಿಕ್ಕಬಳ್ಳಾಪುರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ʼʼಪ್ರಧಾನಿ ನರೇಂದ್ರ ಮೋದಿ ಅವರ ಪ್ರಕಾರ ಪಕ್ಷದಲ್ಲಿ ಎಪ್ಪತ್ತು ವರ್ಷ ವಯಸ್ಸಿಗೆ ನಿವೃತ್ತಿಯಾಗಬೇಕು. ಈಗ ನನಗೆ ಎಂಬತ್ತೊಂದು ವರ್ಷ ವಯಸ್ಸಾಗಿದೆ. ಅರ್ಥಪೂರ್ಣ ಸಮಾರಂಭವನ್ನೂ ಆಚರಣೆ ಮಾಡಿಕೊಂಡಿದ್ದೇವೆ. ನನಗೆ ಪಕ್ಷದಲ್ಲಿ ಟಿಕೆಟ್ ಕೊಡುವುದಿಲ್ಲ ಅಂತ ಪ್ರಧಾನಿ ಮೋದಿ ಹೇಳಿಬಿಟ್ಟಿದ್ದಾರೆ. ಹೀಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ ರಾಜಕಾರಣದಲ್ಲಿ ಸಕ್ರಿಯವಾಗಿರುವೆ'' ಎಂದು ಹೇಳಿದರು.
ʼʼರಾಜ್ಯ ಸರಕಾರ ಹಣ ನೀಡುತ್ತೇವೆ ಎಂದರೂ ಅಕ್ಕಿ ನೀಡದಿರುವುದು ತಪ್ಪು. ನಾನು ರಾಜ್ಯದ ಸಂಸದನಾಗಿ ಹೇಳುತ್ತಿದ್ದೇನೆ, ಅಕ್ಕಿ ಕೊಡದಿರುವುದು ತಪ್ಪು . ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಕೊಡದೆ ಅನ್ಯಾಯ ಮಾಡಿದೆʼʼ ಎಂದು ಇದೇ ವೇಳೆ ವಾಗ್ದಾಳಿ ನಡೆಸಿದರು.
''ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಉಸ್ತುವಾರಿ ಸಚಿವರ ಕಾರ್ಯ ವೈಖರಿ ಹಾಗೂ ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ಈ ಹಿಂದಿನ ವಿಧಾನಸಭಾ ಚುನಾವಣೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಗಲಿಲ್ಲ'' ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಹಿಂದಿನ ರಾಜ್ಯದ ಬಿಜೆಪಿ ಸರ್ಕಾರ ಮತ್ತು ಪಕ್ಷ ನನಗೆ ಯಾವುದೇ ರೀತಿಯಲ್ಲಿ ವಿಶ್ವಾಸ ಹಾಗೂ ಪ್ರತಿನಿದ್ಯ ನೀಡದೆ ಸಚಿವರುಗಳ ಕಾರ್ಯವೈಖರಿ ಹಾಗೂ ನನ್ನನ್ನು ನಿರ್ಲಕ್ಷಿಸಿದ ಕಾರಣ ಚುನಾವಣೆಗಳಿಂದ ನಾನು ಹಿಂದೆ ಸರಿಯುವಂತಯ್ತು, ಮುಂದಿನ ದಿನಗಳಲ್ಲಿಯೂ ಸಕ್ರಿಯ ರಾಜಕಾರಣದಲ್ಲಿ ನಾನು ಮುಂದುವರೆಯಲಾರೆ ಎಂದ ಅವರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯುತ್ತಮವಾದ ಬಜೆಟ್ ನ್ನು ಮಂಡಿಸಿ ಇತಿಹಾಸ ಸೃಷ್ಟಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.