ಚಿಕ್ಕಮಗಳೂರು: ಮನೆ ಮಾಲಕನ ಅಂತ್ಯಸಂಸ್ಕಾರಕ್ಕೆ ತೆರಳಿದ್ದ ವೇಳೆ ಸಿಲಿಂಡರ್ ಸ್ಪೋಟಗೊಂಡು ಮನೆ ಧ್ವಂಸ
► ಕೊಟ್ಟಿಗೆಯಲ್ಲಿದ್ದ ಜಾನುವಾರುಗಳ ಸಜೀವ ದಹನ
ಚಿಕ್ಕಮಗಳೂರು, ಆ.1: ಮನೆ ಮಾಲಕನ ಅಂತ್ಯ ಸಂಸ್ಕಾರಕ್ಕೆ ಹೋಗಿದ್ದ ವೇಳೆ ಸಿಲಿಂಡರ್ ಸ್ಪೋಟಗೊಂಡು ಇಡೀ ಮನೆ ಹೊತ್ತಿ ಉರಿದಿರುವುದಲ್ಲದೇ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ್ದ ಜಾನುವಾರುಗಳು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಾಣೂರು ಗ್ರಾಮದಲ್ಲಿ ವರದಿಯಾಗಿದೆ.
ಗ್ರಾಮದ ಹನುಮಂತಪ್ಪ ಎಂಬವರು ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದು, ಮಧ್ಯಾಹ್ನದ ವೇಳೆ ಮನೆ ಮಂದಿ ಸೇರಿದಂತೆ ಸಂಬಂಧಿಕರು ಹನುಮಂತಪ್ಪ ಅವರ ಶವಸಂಸ್ಕಾರಕ್ಕೆ ತೆರಳಿದ್ದರು. ಈ ವೇಳೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ನಲ್ಲಿ ಗ್ಯಾಸ್ ಸೋರಿಕೆಯಾಗಿದ್ದಲ್ಲದೇ ಮನೆ ಮಂದಿ ಸ್ಮಶಾನದಿಂದ ಹಿಂದಿರುಗುವಷ್ಟರಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಸ್ಫೋಟದಿಂದಾಗಿ ಇಡೀ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಬೆಂಕಿಯ ಕೆನ್ನಾಲಿಗೆಗೆ ಮನೆಯ ಹಿಂಬದಿಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಎರಡು ಹಸುಗಳು ಹಾಗೂ 1 ಕುರಿ ಸಜೀವ ದಹನವಾಗಿವೆ. ಘಟನೆಯಲ್ಲಿ ಮನೆಯಲ್ಲಿದ್ದ ಸಾಮಾನು ಸರಂಜಾಮುಗಳು ಬೆಂಕಿಗೆ ಸಿಲುಕಿ ಸುಟ್ಟು ಕರಕಲಾಗಿವೆ ಎಂದು ತಿಳಿದು ಬಂದಿದೆ.
ಕುಟುಂಬಸ್ಥರು ಕೂಡಲೇ ಪೊಲೀಸರು, ಅಗ್ನಿಶಾಮಕದಳಕ್ಕೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
ಘಟನೆ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗ್ಯಾಸ್ ಸಿಲಿಂಡರ್ ಸೋರಿಕೆಗೆ ಕಾರಣ ಏನೆಂದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.