ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಿಎಂ ಸಿದ್ದರಾಮಯ್ಯ
ಪ್ರತಿಭಟನೆಗೆ ಸಂಬಂಧಿಸಿ 10 ಸಾವಿರ ರೂ. ದಂಡ ವಿಧಿಸಿದ್ದ ನ್ಯಾಯಾಲಯ
ಬೆಂಗಳೂರು: ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸೇರಿದಂತೆ ಕೆಲ ನಾಯಕರಿಗೆ ಕರ್ನಾಟಕ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಕೆಲ ನಾಯಕರಿಗೆ ದಂಡ ವಿಧಿಸಲಾಗಿತ್ತು. ಅಲ್ಲದೆ, ಮಾರ್ಚ್ 6 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ಹಿಂದೆ ಸೂಚನೆ ನೀಡಲಾಗಿತ್ತು.
2022 ರ ಎಪ್ರಿಲ್ 14 ರಂದು ರೇಸ್ ವ್ಯೂ ಹೋಟೆಲ್ ಬಳಿ ಕೆಎಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಕಾಂಗ್ರೆಸ್ ನಾಯಕರು ವಿಧಾನಸೌಧದ ಚಲೋ ಕೈಗೊಂಡಿದ್ದರು. ಅಂದಿನ ಬಿಜೆಪಿ ಸರಕಾರ ಕಾಂಗ್ರೆಸ್ ನಾಯಕರ ವಿರುದ್ಧ ದೂರು ನೀಡಿತ್ತು.
ಈ ಸಂಬಂಧ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಕೆಲವು ಪ್ರಮುಖ ನಾಯಕರಿಗೆ ದಂಡ ವಿಧಿಸಿತ್ತು. ಆದರೆ, ನಮ್ಮ ಪ್ರತಿಭಟನೆ ಕಾನೂನು ಬದ್ಧವಾಗಿತ್ತು ಎಂದಿರುವ ಸಿದ್ದರಾಮಯ್ಯ, ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವವರೆಗೆ ಆದೇಶವನ್ನು ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ಈ ಮನವಿಯನ್ನು ನ್ಯಾಯಾಲಯ ನಿರಾಕರಿಸಿತ್ತು.