ಮೆಟ್ರೋ ಪ್ರಯಾಣ ದರ ಇಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಗುರಿಯಾಗಿರುವ ಬೆಂಗಳೂರು ನಮ್ಮ ಮೆಟ್ರೋ ರೈಲು ಪ್ರಯಾಣ ದರವನ್ನು ಇಳಿಸುವಂತೆ ಬಿಎಂಆರ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.
ಗುರುವಾರ ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ ಅವರು, ‘ಬೆಂಗಳೂರು ನಮ್ಮ ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್)ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ’ ಎಂದು ತಿಳಿಸಿದ್ದಾರೆ.
ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ತೀವ್ರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಕೂಡಲೇ ನಮ್ಮ ಮೆಟ್ರೋ ಪ್ರಯಾಣ ದರ ಇಳಿಸಬೇಕು ಎಂದು ಬಿಎಂಆರ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ ಎಂದು ಅವರು ವಿವರಣೆ ನೀಡಿದ್ದಾರೆ.
ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‍ಸಿಎಲ್ ಗಮನಕ್ಕೆ ತಂದಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
‘ಮೆಟ್ರೋ ದರ ಏರಿಸಿ ಕೇಂದ್ರಕ್ಕೆ ಅದರ ಹಣೆಪಟ್ಟಿ ಕಟ್ಟಲು ಹೊರಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜನರೇ ಎದಿರೇಟು ಕೊಟ್ಟಿದ್ದಾರೆ. ಬಿಎಂಆರ್‍ಸಿಎಲ್ ಮೆಟ್ರೋ ದರ ಪರಿಷ್ಕರಣೆ ಮಾಡಿದ ಬಳಿಕ ಕೇಂದ್ರ ಸರಕಾರದತ್ತ ಬೆರಳು ತೋರಿ ಆರೋಪ ಹೊರಿಸಿದ್ದ ಮುಖ್ಯಮಂತ್ರಿ ಈಗ ಜನರ ವಿರೋಧ ತಾರಕಕ್ಕೇರುತ್ತಲೇ ಮಣಿದು ಬೆಲೆ ಇಳಿಸಲು ಕ್ರಮ ಕೈಗೊಂಡಿದ್ದಾರೆ.
-ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವ
ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ…
— CM of Karnataka (@CMofKarnataka) February 13, 2025
‘ಬೆಂಗಳೂರು ನಗರದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಎರಡು ವರ್ಷಗಳಿಂದ ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು ಆಗಿಲ್ಲ. ಸರಕಾರದಲ್ಲಿ ಹಣ ಇಲ್ಲ. ದರ ಏರಿಕೆಗೆ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೆಟ್ರೋದಲ್ಲಿ ಸಂಚರಿಸುತ್ತಿದ್ದ ಮಧ್ಯಮ, ಬಡ ವರ್ಗದವರಿಗೆ ಇದರಿಂದ ಸಮಸ್ಯೆಯಾಗಿದೆ. ಸರಕಾರ ಮೆಟ್ರೋ ಪ್ರಯಾಣ ದರ ಕಡಿಮೆ ಮಾಡದೇ ಇದ್ದರೆ ಜೆಡಿಎಸ್ ಪಕ್ಷದ ವತಿಯಿಂದ ಸಿಎಂ ಕಚೇರಿಗೆ ಮುತ್ತಿಗೆ ಹಾಕುತ್ತೇವೆ’
-ಎಚ್.ಎಂ.ರಮೇಶ್ ಗೌಡ, ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ