ಆಲಮಟ್ಟಿಯಲ್ಲಿ ಕೃಷ್ಣೆಗೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿರುವ ಕೃಷ್ಣೆಯ ಜಲಧಿಗೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.
ಸಚಿವ ಎಂ.ಬಿ.ಪಾಟೀಲ್, ಕೃಷ್ಣ ಬೈರೇಗೌಡ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼʼಯುಕೆಪಿ ಮೂರನೇ ಹಂತ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಿದೆ. ಆದರೆ, ಇದಕ್ಕೂ ಮುನ್ನಾ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕಿದೆ. ಅದು ಆಗದೇ ಯುಕೆಪಿ ಮೂರನೇ ಹಂತ ಅನುಷ್ಠಾನ ಅಸಾಧ್ಯ. ಮೂರನೇ ಹಂತದ ಅನುಷ್ಠಾನಕ್ಕೆ ಅಂದಾಜು 11 ಲಕ್ಷ ಕೋಟಿ ರೂ. ಅನುದಾನ ಇದೆ. ಈ ಹಿನ್ನೆಲೆಯಲ್ಲಿ ಯುಕೆಪಿ ರಾಷ್ಟ್ರೀಯ ಯೋಜನೆಯಾಗಬೇಕಿದೆʼʼ ಎಂದರು.
ʼʼಕಾವೇರಿ ನೀರಿನ ವಿಷಯದಲ್ಲಿ ರಾಜ್ಯದ ಹಿತರಕ್ಷಣೆ ಕೆಲಸ ನಮ್ಮ ಸರಕಾರ ಮಾಡಲಿದೆʼʼ ಎಂದು ಇದೇ ವೇಳೆ ತಿಳಿಸಿದರು.
ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆಯ ಸಚಿವರು ಹಾಗೂ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್,ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ, ಜವಳಿ, ಕಬ್ಬು ಅಭಿವೃದ್ಧಿ,ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ ಸೇರಿದಂತೆ ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.