ಹೈ ಪವರ್ ಸಮಿತಿ ಸಭೆ ನಡೆಸಿ, ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿಗೆ ಮನವಿ: ಸಿಎಂ ಸಿದ್ದರಾಮಯ್ಯ
Photo: facebook
ಹೊಸದಿಲ್ಲಿ ಡಿ 19: ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರ ಭೇಟಿ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಅವರು, ರಾಜ್ಯಕ್ಕೆ ಬರ ಪರಿಹಾರ ಸಿಗಬೇಕು ಎಂದರೆ ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆ ನಡೆಯಬೇಕು. ಆದರೆ ನಾವು ಇದುವರೆಗೂ ಮೂರು ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರೂ ಪ್ರಾಥಮಿಕ ಸಭೆಯನ್ನೇ ನಡೆಸಿಲ್ಲ. ಆದ್ದರಿಂದ ತುರ್ತಾಗಿ ಸಭೆ ನಡೆಸಿ ಶೀಘ್ರ ಬರ ಪರಿಹಾರ ಬಿಡುಗಡೆಗೊಳಿಸಲು ಸೂಚಿಸಬೇಕು ಎಂದು ಪ್ರಧಾನಿ ಅವರಿಗೆ ಮನವಿ ಮಾಡಿದ್ದೇವೆ ಎಂದರು.
ನಾವು ಮುಖ್ಯವಾಗಿ ಐದು ಒತ್ತಾಯಗಳನ್ನು ಮಂಡಸಿ ಮನವಿ ಮಾಡಿದ್ದೇವೆ. ನಮ್ಮ ಮನವಿಯನ್ನು ಸಮಾಧಾನದಿಂದ ಕೇಳಿಸಿಕೊಂಡು ಪ್ರಧಾನಿ ಅವರು ಸ್ಪಂದಿಸಿದ್ದಾರೆ. ಸ್ಪಂದನೆಗೆ ತಕ್ಕಂತೆ ಶೀಘ್ರ ಪರಿಹಾರವನ್ನು ಅವರಿಂದ ನಿರೀಕ್ಷಿಸಿದ್ದೇವೆ ಎಂದು ಹೇಳಿದರು.
ಮುಖ್ಯಾಂಶಗಳು:
*ಬರ ಪರಿಹಾರ ಶೀಘ್ರ ಬಿಡುಗಡೆ
*ನರೇಗಾ ಕೆಲಸವನ್ನು 150 ದಿನಗಳಗೆ ಹೆಚ್ಚಿಸಬೇಕು.
*ಭದ್ರಾ ಮೇಲ್ದಂಡೆಗೆ ಕೊಟ್ಟ ಮಾತಿನಂತೆ ಹಣ ಬಿಡುಗಡೆ ಮಾಡಬೇಕು.
*ಮಹದಾಯಿ ಯೋಜನೆಗೆ ಪರಿಸರ ಕ್ಲಿಯರೆನ್ಸ್ ಶೀಘ್ರವಾಗಿ ನೀಡಬೇಕು.
*ಮೇಕೆದಾಟು ಯೋಜನೆ ಕಾರ್ಯಾರಂಭಕ್ಕೆ ಅನುಮತಿಸಬೇಕು
ಈ ಐದು ಬೇಡಿಕೆಗಳ ಈಡೇರಿಕೆಗೆ ಮನವಿ ಅರ್ಪಿಸಿದ್ದೇವೆ ಎಂದು ಸಿಎಂ ತಿಳಿಸಿದರು.