ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಆ.31: ಅನಾರೋಗ್ಯದಿರಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಜೆಡಿಎಸ್ ಶಾಸಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಂಜೆ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಸಿದ್ದರಾಮಯ್ಯ ಅವರ ಜೊತೆ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೂಡ ತೆರಳಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದ್ದಾರೆ.
ಸುಸ್ತು ಮತ್ತು ತೀವ್ರ ಜ್ವರದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡುಬಂದಿದ್ದು, ಸದ್ಯ ತೀವ್ರ ನಿಗಾ ಘಟಕದಿಂದ ವಿಶೇಷ ವಾರ್ಡ್‍ಗೆ ಶಿಫ್ಟ್ ಮಾಡಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
ಗುರುವಾರ ಈ ಕುರಿತು ಪ್ರತಿಕ್ರಿಯಿಸಿದ ಎಚ್‍ಡಿಕೆ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ, ‘ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಂದೆಯವರು ಈಗ ಉತ್ತಮವಾಗಿ ಚೇತರಿಸಿಕೊಂಡಿದ್ದಾರೆ. ಅವರನ್ನು ಈಗ ವಾರ್ಡ್‍ಗೆ ಸ್ಥಳಾಂತರ ಮಾಡಲಾಗಿದ್ದು, ಶೀಘ್ರವೇ ಮನೆಗೆ ಮರಳಲಿದ್ದಾರೆ. ಕೆಲದಿನ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.
ಆರೋಗ್ಯ ವಿಚಾರಿಸಿದ ಗಣ್ಯರು
ಇನ್ನೂ, ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕುಮಾರಸ್ವಾಮಿ ಅವರನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಮತ್ತಿತರ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು.