ಕೇಂದ್ರದ ವಿರುದ್ಧ ರಾಜ್ಯ ಸರಕಾರ ನಡೆಸುವ ಹೋರಾಟ ಬೆಂಬಲಿಸುವಂತೆ ರಾಜ್ಯದ ಎಲ್ಲಾ ಸಂಸದರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
Photo: fb.com/siddaramaiah
ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ನಡೆಸಲಿರುವ ಹೋರಾಟವನ್ನು ಬೆಂಬಲಿಸುವಂತೆ ಪತ್ರ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸಚಿವರು, ಬಿಜೆಪಿ,ಜೆಡಿಎಸ್ ಸಂಸದರು, ರಾಜ್ಯಸಭಾ ಸದಸ್ಯರಿಗೆ ಪತ್ರ ಬರೆದಿದ್ದಾರೆ.
ಕನ್ನಡಿಗರ ಹಕ್ಕು ಮತ್ತು ಸ್ವಾಭಿಮಾನಕ್ಕೆ ಕೇಂದ್ರದಿಂದ ನಿರಂತರವಾಗಿ ಆಗುತ್ತಿರುವ ಅನ್ಯಾಯ ಮತ್ತು ಕನ್ನಡಿಗರ ತೆರಿಗೆ ಹಣಕ್ಕೆ ಆಗುತ್ತಿರುವ ವಂಚನೆಯನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಬುಧವಾರ ನಡೆಯುವ ಹೋರಾಟಕ್ಕೆ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ತೇಜಸ್ವಿ ಸೂರ್ಯ, ಅನಂತ್ ಕುಮಾರ್ ಹೆಗಡೆ, ನಳಿನ್ ಕುಮಾರ್ ಕಟೀಲ್, ಹೆಚ್ ಡಿ ದೇವೇಗೌಡ, ಭಗವಂತ ಖೂಬಾ, ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ ಸಹಿತ ಹಲವು ಸಂಸದರಿಗೆ ಬರೆದ ಪತ್ರದಲ್ಲಿ ಸೂಚಿಸಿದ್ದಾರೆ.
ಕೇಂದ್ರ ಸರ್ಕಾರದಿಂದ ಆಗುತ್ತಿರುವ ನಿರಂತರ ಅನ್ಯಾಯ ಮತ್ತು ಕರ್ನಾಟಕದ ವಿಚಾರವಾಗಿ ಕೇಂದ್ರ ಸರ್ಕಾರವು ತೋರುತ್ತಿರುವ ಮಲತಾಯಿ ಧೋರಣೆಯು ತಮಗೆ ಈಗಾಗಲೇ ತಿಳಿದ ವಿಷಯವಾಗಿರುತ್ತದೆ. ಇದರ ವಿರುದ್ಧ ಪ್ರತಿಭಟಿಸಲು ಮತ್ತು ದೇಶದ ಗಮನ ಸೆಳೆಯಲು ತೀರ್ಮಾನಿಸಲಾಗಿದೆ. ರಾಜ್ಯದ ಉಪ ಮುಖ್ಯಮಂತ್ರಿಗಳು, ಎಲ್ಲ ಸಚಿವರು, ಶಾಸಕರು ಮತ್ತು ಸಂಸದರು ಸೇರಿ ಒಂದು ದಿನದ ಧರಣಿ ಸತ್ಯಾಗ್ರಹವನ್ನು ನಡೆಸಲು ತೀರ್ಮಾನಿಸಿದ್ದೇವೆ.
ಕರ್ನಾಟಕಕ್ಕೆ ತೆರಿಗೆ ಪಾಲಿನ ಹಂಚಿಕೆಯಲ್ಲಿ ಆಗುತ್ತಿರುವ ಭಾರೀ ಅನ್ಯಾಯ, ಬರಪರಿಹಾರ ನೀಡದಿರುವುದು, ವಿವಿಧ ಯೋಜನೆಗಳಿಗೆ ಅನುಮತಿ ಮತ್ತು ನೆರವು ನೀಡುವಲ್ಲಿ ತೋರುತ್ತಿರುವ ನಿರ್ಲಕ್ಷ್ಯ ಮತ್ತು ವಿಳಂಬ ಇತ್ಯಾದಿಗಳು ರಾಜ್ಯದಲ್ಲಿ ಜನಜೀವನವನ್ನು ವಿಪರೀತವಾಗಿ ಬಾಧಿಸುತ್ತಿವೆ. ಈ ವಿಚಾರವನ್ನು ಜವಾಬ್ದಾರಿಯುತ ಚುನಾಯಿತ ಪ್ರತಿನಿಧಿಗಳಾದ ತಾವು ಅರಿತೇ ಇರುತ್ತೀರಿ. ಆದುದರಿಂದ, ಈ ಧರಣಿ ಸತ್ಯಾಗ್ರಹದಲ್ಲಿ ತಾವು ಕೂಡಾ ಪಾಲ್ಗೊಂಡು ಅದರ ಯಶಸ್ಸಿಗೆ ನೆರವಾಗಬೇಕು ಎಂದು ತಮ್ಮಲ್ಲಿ ಕರ್ನಾಟಕದ ಸಮಸ್ತ ಜನತೆಯ ಪರವಾಗಿ ವಿನಂತಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.