ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಸಮಾಲೋಚನೆ
ಬೆಂಗಳೂರು : ‘ಆಪರೇಷನ್ ಕಮಲ’ ಮಾಡುವ ಸಂಬಂಧ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆ, ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಹಾಗೂ ಲೋಕಸಭಾ ಚುನಾವಣೆ ಫಲಿತಾಂಶವೂ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಮಂಗಳವಾರ ಇಲ್ಲಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಮೈಸೂರಿಗೆ ಪ್ರವಾಸ ತೆರಳುವ ಮುನ್ನ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ, ಮಧುಬಂಗಾರಪ್ಪ, ಚೆಲುವರಾಯಸ್ವಾಮಿ ಸೇರಿದಂತೆ ಇನ್ನಿತರರೊಂದಿಗೆ ಚರ್ಚಿಸಿದ್ದಾರೆಂದು ಗೊತ್ತಾಗಿದೆ.
ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಮಹಾರಾಷ್ಟ್ರ ಮಾದರಿಯಲ್ಲೇ ಕರ್ನಾಟಕ ರಾಜ್ಯದಲ್ಲಿನ ಕಾಂಗ್ರೆಸ್ ನೇತೃತ್ವದ ಸರಕಾರ ಉರುಳಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆ ನೀಡಿದ್ದರು. ಆ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ಶಾಸಕರನ್ನು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡುವ ಸಂಬಂಧ ಮಾತುಕತೆ ನಡೆಸಿದ್ದಾರೆಂದು ಹೇಳಲಾಗಿದೆ.
ಜತೆಗೆ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದೆ. ಅಲ್ಲದೆ, ಪ್ರಜ್ವಲ್ ರೇವಣ್ಣ ಬಂಧನಕ್ಕೆ ಸಾರ್ವಜನಿಕ ವಲಯದಲ್ಲಿ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆ ಕುರಿತು ಕೈಗೊಳ್ಳಬೇಕಿರುವ ಕ್ರಮಗಳ ಸಂಬಂಧ ಸಿಎಂ ಸಿದ್ದರಾಮಯ್ಯ, ಸಂಪುಟದ ಸಹೋದ್ಯೋಗಿಗಳ ಜತೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.