ಫಾಕ್ಸ್ಕಾನ್ ಸಂಸ್ಥೆ ಅಧ್ಯಕ್ಷರ ಜೊತೆ ಸಿಎಂ ಚರ್ಚೆ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ತೈವಾನ್ ಮೂಲದ ಆಪಲ್ ಫೋನ್ ಕಂಪೆನಿ ಫಾಕ್ಸ್ಕಾನ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷ ಯಂಗ್ ಲಿಯು ಜೊತೆ ಚರ್ಚೆ ನಡೆಸಿದರು.
ಶುಕ್ರವಾರ ನಗರದ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ ಭೋಜನ ಕೂಟದ ವೇಳೆ ಫಾಕ್ಸ್ಕಾನ್ ಕಂಪೆನಿಗೆ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಅಗತ್ಯವಾದ ಎಲ್ಲ ರೀತಿಯ ಸಹಕಾರ, ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.
ಸಾಂಸ್ಕೃತಿಕವಾಗಿ ಉನ್ನತ ಮೌಲ್ಯಗಳನ್ನು ಆಚರಿಸುತ್ತಿರುವ ರಾಜ್ಯದಲ್ಲಿ ಕೈಗಾರಿಕೆಗಳಿಗೆ ಅತ್ಯಗತ್ಯವಾದ ಕಾನೂನು ಮತ್ತು ಸುವ್ಯವಸ್ಥೆಯೂ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಮನವರಿಕೆ ಮಾಡಿಕೊಟ್ಟರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕರೂಪ್ ಕೌರ್ ಸೇರಿದಂತೆ ಕೈಗಾರಿಕೆ ಮತ್ತು ಐಟಿ ಬಿಟಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.