ರಾಜ್ಯದಲ್ಲಿರುವ ಎಲ್ಲಾ ವಿವಿಗಳ ಆರ್ಥಿಕ ಸ್ಥಿತಿ ಬಗ್ಗೆ ಪರಾಮರ್ಶಿಸಲು ಸಂಪುಟ ಉಪಸಮಿತಿ

ಸಚಿವ ಡಾ. ಎಂ.ಸಿ. ಸುಧಾಕರ್
ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ವಿಶ್ವವಿದ್ಯಾಲಯಗಳ ಆರ್ಥಿಕ ಪರಿಸ್ಥಿತಿಗಳ ಬಗ್ಗೆ ಪರಾಮರ್ಶಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ ಎಂದು ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಮಂಗಳವಾರ ವಿಧಾನಪರಿಷತ್ತಿನಲ್ಲಿ ಗಮನ ಸೆಳೆಯುವ ಸೂಚನೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಿತಿಯು ವಿಶ್ವವಿದ್ಯಾಲಯಗಳ ಬಗ್ಗೆ ಸಭೆ ನಡೆಸಿದೆ. ವಿಶ್ವವಿದ್ಯಾಲಯಗಳು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳೊಂದಿಗೆ ರಾಜ್ಯದಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಸ್ಥಿತಿಗತಿಗಳನ್ನು ಚರ್ಚಿಸಲಾಗಿದೆ ಎಂದರು.
ಮುಂಬರುವ ಭವಿಷ್ಯದ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ವಿದ್ಯಾರ್ಥಿಗಳಿಗೆ ಗುಣಾತ್ಮಕ ಶೈಕ್ಷಣಿಕ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ನೂತನವಾಗಿ ಸ್ಥಾಪಿಸಲ್ಪಟ್ಟ ಕೆಲವು ವಿಶ್ವವಿದ್ಯಾಲಯಗಳ ಆರ್ಥಿಕ ಪರಿಸ್ಥಿತಿ, ವಿದ್ಯಾರ್ಥಿಗಳ ಪ್ರವೇಶಾತಿ, ಮೂಲಸೌಲಭ್ಯದ ಕೊರತೆ ಮುಂತಾದ ಪ್ರಮುಖ ಅಂಶಗಳ ಕುರಿತು ಮೊದಲ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸಚಿವರು ಹೇಳಿದರು.
ಸಭೆಯಲ್ಲಿ ಸ್ವೀಕೃತವಾದ ಸಲಹೆಗಳನ್ನು ಪರಾಮರ್ಶಿಸಿ ಕೆಲವು ವಿಶ್ವವಿದ್ಯಾಲಯಗಳ ವಿಲೀನ, ಹೆಚ್ಚಿನ ಅನುದಾನದ ಅಗತ್ಯತೆ ಮತ್ತು ಹಂತ-ಹಂತವಾಗಿ ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ವಿಶ್ವವಿದ್ಯಾಲಯಗಳ ಬಲವರ್ಧನೆಗಾಗಿ ಉನ್ನತ ಶಿಕ್ಷಣ ಇಲಾಖೆ ವಿಸ್ತ್ರತವಾದ ವರದಿಯನ್ನು ಸಚಿವ ಸಂಪುಟಕ್ಕೆ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
2022-23 ಆರ್ಥಿಕ ಸಾಲಿನ ಆಯವ್ಯಯದಂತೆ ಕಾಲೇಜುಗಳ ಮೇಲ್ವಿಚಾರಣೆಯನ್ನು ಸುಧಾರಿಸಲು ರಾಜ್ಯದ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶಗಳಲ್ಲಿ 7 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿತ್ತು ಎಂದು ಅವರು ತಿಳಿಸಿದರು.
ಈ ವಿಶ್ವವಿದ್ಯಾಲಯಗಳ ಸ್ಥಾಪನೆಗಾಗಿ ಯಾವುದೇ ಜಮೀನನ್ನಾಗಲೀ ವಾಹನವನ್ನಾಗಲೀ ಖರೀಸುವಂತಿಲ್ಲ ಹಾಗೂ ಹೊಸ ಕಟ್ಟಡಗಳನ್ನು ನಿರ್ಮಿಸುವಂತಿಲ್ಲ ಎಂದು ಆದೇಶವನ್ನು ಅಂದಿನ ಸರಕಾರ ಹೊರಡಿಸಿತ್ತು ಎಂದು ಸ್ಪಷ್ಟಪಡಿಸಿದರು.
ಈಗಾಗಲೆ ಮಾತೃ ವಿಶ್ವವಿದ್ಯಾಲಯಗಳಿಗೆ ಮಂಜೂರಾಗಿರುವ ಹುದ್ದೆಗಳಲ್ಲಿ ಅವಶ್ಯ ಹುದ್ದೆಗಳನ್ನು ಬಳಸಿಕೊಂಡು ಸ್ಥಾಪಿಸುವುದು, ಆದರೆ ಯಾವುದೇ ಹೊಸ ಹುದ್ದೆಗಳನ್ನು ಸೃಜಿಸುವಂತಿಲ್ಲ ಎಂದು ಸರಕಾರ ಅದೇಶದಲ್ಲಿ ಹೇಳಿತ್ತು ಎಂದು ಸಚಿವರು ಉತ್ತರಿಸಿದರು.