ದಿಲ್ಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ | SC-ST ವಿದ್ಯಾರ್ಥಿಗಳಿಗೆ ಮಾಸಿಕ ಶಿಷ್ಯವೇತನ 15 ಸಾವಿರಕ್ಕೆ ಹೆಚ್ಚಳ : ಸಿಎಂ
Photo : x/@siddaramaiah
ಬೆಂಗಳೂರು : ‘ಐಎಎಸ್, ಐಆರ್ಎಸ್ ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ರಾಷ್ಟ್ರದ ರಾಜಧಾನಿ ದಿಲ್ಲಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(ಎಸ್ಸಿ-ಎಸ್ಟಿ) ಸಮುದಾಯದ ಮಕ್ಕಳಿಗೆ ಉತ್ತಮ ವಸತಿ ಸೌಲಭ್ಯದ ಜತೆಗೆ ಮಾಸಿಕ 15 ಸಾವಿರ ರೂ.ನೀಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆ ರಾಜ್ಯ ಪರಿಷತ್ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸದ್ಯ ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೆ 10ಸಾವಿರ ರೂಪಾಯಿ ನೀಡಲಾಗುತ್ತಿದೆ. ಆದರೆ, ಇದನ್ನು 15 ಸಾವಿರ ರೂ.ಗಳಿಗೆ ಏರಿಸುವ ಜತೆಗೆ ವಸತಿ ಸೌಲಭ್ಯ ಒದಗಿಸಲಾಗುವುದು ಎಂದರು.
ಖಾಲಿ ಇರುವ ಹೋಬಳಿಗಳಲ್ಲೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಆರಂಭಿಸಲೇಬೇಕು. ಆಯಾ ಹೋಬಳಿಯ ವಿದ್ಯಾರ್ಥಿಗಳಿಗೆ ಶೇ.75 ರಷ್ಟು ಸೀಟು, ಉಳಿದ ಶೇ.25 ರಷ್ಟು ಸೀಟುಗಳನ್ನು ಇತರೆ ಪ್ರದೇಶದ ವಿಧ್ಯಾರ್ಥಿಗಳಿಗೆ ವಸತಿ ಶಾಲೆಗಳಲ್ಲಿ ನೀಡಬೇಕು. ಜತೆಗೆ ಇತರೆ ನ್ಯೂನ್ಯತೆಗಳನ್ನು ಸರಿಪಡಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಅವರು ತಾಕೀತು ಮಾಡಿದರು.
ಬಜೆಟ್ನಲ್ಲಿ ನಾವು ಘೋಷಿಸಿರುವ ಎಲ್ಲ ಕಾರ್ಯಕ್ರಮಗಳೂ ಜಾರಿ ಮಾಡಲೇಬೇಕು. ಆಶ್ರಮ ಶಾಲೆಗಳಲ್ಲಿ ರಾತ್ರಿ ವೇಳೆ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಾರೆ ಎನ್ನುವುದು ಕಂಡು ಬಂದಿದೆ. ಇದಕ್ಕೆ ಅವಕಾಶ ಆಗಬಾರದು. ಮನೆಗೆ ಕರೆದೊಯ್ಯದಂತೆ ಪೋಷಕರಿಗೆ ತಿಳಿಸಬೇಕು ಎಂದರು.
ಹಳ್ಳಿಗಾಡು, ಬಡ ಕುಟುಂಬಗಳಿಗೆ ಸರ್ಕಾರದಿಂದ ಬರುವ ಸವಲತ್ತುಗಳನ್ನು ಸರಿಯಾಗಿ ತಲುಪಿಸಬೇಕು. ಇದರಲ್ಲಿ ವಿಫಲರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಾವು ಕೊಟ್ಟ ಅನುದಾನ ಆಯಾ ಉದ್ದೇಶಗಳಿಗೇ ಬಳಕೆಯಾಗಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲದಂತೆ ಆಯಾ ಸಮುದಾಯಗಳಿಗೆ ಸವಲತ್ತು ತಲುಪಿಸಬೇಕು. ಹಾಸ್ಟೆಲ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸದಿದ್ದರೆ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
10 ವರ್ಷದಲ್ಲಿ ಈ ಯೋಜನೆಗಳಿಂದ ಸಮುದಾಯದ ಮೇಲೆ ಬೀರಿರುವ ಪರಿಣಾಮ, ಸಮುದಾಯಕ್ಕೆ ಯೋಜನೆ ತಲುಪಿರುವ ಪ್ರಮಾಣದ ಬಗ್ಗೆ, ಹಾಗೂ ಅವರ ಆರ್ಥಿಕ ಸ್ಥಿತಿ ಪ್ರಗತಿ ಆಗಿರುವ ಬಗ್ಗೆ ಮೌಲ್ಯಮಾಪನ ಮಾಡಲಾಗುವುದು. 3 ತಿಂಗಳ ಬಳಿಕ ಮತ್ತೊಮ್ಮೆ ಪರಿಷತ್ ಸಭೆ ಕರೆಯುತ್ತೇವೆ. ಯಾರಿಂದ ಲೋಪ ಆಗಿದೆ ಎಂದು ಗೊತ್ತಾದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.