ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಬೆಂಗಳೂರು: ‘ರಾಜ್ಯ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳಿಂದಾಗಿ ಗ್ರಾಮೀಣ ಭಾಗದ ಮಹಿಳೆಯರು ದಾರಿ ತಪ್ಪಿ, ಅಲೆಮಾರಿಗಳಾಗಿದ್ದಾರೆ’ ಎಂದು ಹೇಳಿಕೆ ನೀಡಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ತುರುವೇಕೆರೆಯಲ್ಲಿ ಎ.13ರಂದು ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಗ್ರಾಮೀಣ ಪ್ರದೇಶದ ಮಹಿಳೆಯರ ಕುರಿತು ಕುಮಾರಸ್ವಾಮಿ ಉದ್ದೇಶಪೂರ್ವಕವಾಗಿ ಈ ಹೇಳಿಕೆ ನೀಡಿದ್ದಾರೆ. ಐದು ಗ್ಯಾರಂಟಿಗಳಿಂದ ಸಬಲರಾಗುತ್ತಿರುವ ಮಹಿಳಾ ಮತದಾರರು ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಒಲವು ತೋರಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಆದುದರಿಂದ, ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಪುರುಷ ಮತದಾರರನ್ನು ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸುವಂತೆ ಮನವೊಲಿಸಲು ಕುಮಾರಸ್ವಾಮಿ ಈ ಹೇಳಿಕೆ ಮೂಲಕ ಯತ್ನಿಸಿದ್ದಾರೆ. ಕುಮಾರಸ್ವಾಮಿ ಐಪಿಸಿ, ಪ್ರಜಾಪ್ರತಿನಿಧಿ ಕಾಯ್ದೆ ಹಾಗೂ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ ಎಂದು ಉಗ್ರಪ್ಪ ದೂರಿದ್ದಾರೆ.
ಆದುದರಿಂದ, ಮಹಿಳೆಯರ ಘನತೆಯನ್ನು ಕಾಪಾಡುವುದು ಹಾಗೂ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಯುವ ಸಲುವಾಗಿ ಕುಮಾರಸ್ವಾಮಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಸೂಚನೆ ನೀಡಬೇಕು ಎಂದು ಉಗ್ರಪ್ಪ ಕೋರಿದ್ದಾರೆ.