ಪ್ರಾಸಿಕ್ಯೂಷನ್‌ಗೆ ಅನುಮತಿ | ರಾಜ್ಯಪಾಲರ ನಡೆ ಖಂಡಿಸಿ ಸಿಎಂ ತವರು ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
ಮೈಸೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಡೆ ಖಂಡಿಸಿ ಮತ್ತು ಅವರನ್ನು ರಾಜ್ಯಪಾಲರ ಹುದ್ದೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿ ಸಿದ್ಧರಾಮಯ್ಯ ಅವರ ತವರಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ತಲುಪಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ನಗರದ ಗಾಂಧಿ ವೃತ್ತದಲ್ಲಿ ಸೋಮವಾರ ಜಮಾವಣೆಗೊಂಡ ಕಾಂಗ್ರೆಸ್ ಸಚಿವರು, ಶಾಸಕರುಗಳು, ಮುಖಂಡರು ಮತ್ತು ಕಾರ್ಯಕರ್ತರ್ತರು ರಾಜ್ಯಪಾಲ, ಬಿಜೆಪಿ-ಜೆಡಿಎಸ್ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬೆಂಬಲ ಸೂಚಿಸಿದರು.
ಇದೇ ವೇಳೆ ಮಾತನಾಡಿದ ಸಚಿವ ಡಾ.ಎಚ್.ಸಿ.ಮಹದೇವಪ್ಪ, "ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರದ ಬಿಜೆಪಿ, ಸಂವಿಧಾನ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲದೆ ಎರಡು ಬಾರಿ ಆಪರೇಷನ್ ಕಮಲದ ಮೂಲಕ ರಾಜ್ಯದಲ್ಲಿ ಅಧಿಕಾರ ನಡೆಸಿ ಈಗ ಮತ್ತೊಮ್ಮೆ ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯಬೇಕು ಎಂದು ರಾಜ್ಯಪಾಲರ ಮೂಲಕ ಜನರಿಂದ ಆಯ್ಕೆಯಾಗಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದ್ದಾರೆ. ಬಿಜೆಪಿ-ಜೆಡಿಎಸ್ ಮತ್ತೊಮ್ಮೆ ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯಲು ಜಂಟಿಯಾಗಿ ಪ್ರಯತ್ನಿಸುತ್ತಿದ್ದಾರೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಡಾ ಸೈಟ್ ಹಂಚಿಕೆಯಲ್ಲಿ ಸಿದ್ಧರಾಮಯ್ಯ ಅವರ ಪಾತ್ರ ಏನೂ ಇಲ್ಲ. ಅವರಿಗೆ ಸೇರಿದ 3.16 ಗುಂಟೆ ಜಮೀನನ್ನು ಮುಡಾ ಅಕ್ರಮವಾಗಿ ವಶಪಡಿಸಿಕೊಂಡಿತ್ತು. ನಮ್ಮ ಜಮೀನನ್ನು ವಾಪಸ್ ನೀಡುವಂತೆ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿಯವರು ಮುಡಾಗೆ ಎರಡು ಬಾರಿ ಪತ್ರ ಬರೆದಿದ್ದಾರೆ. ಇದರಿಂದ ನಮ್ಮಿಂದ ತಪ್ಪಾಗಿದೆ ಎಂದು ಮುಡಾದವರು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ 14 ಸೈಟ್ ಗಳನ್ನು ನೀಡಿದೆ. ಈಗ ಅಕ್ರಮ ಎಂದರೆ ಹೇಗೆ? ಇದರಲ್ಲಿ ಸಿದ್ಧರಾಮಯ್ಯ ಅವರ ಪಾತ್ರ ಏನಿದೆ ಎಂದು ಪ್ರಶ್ನಿಸಿದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ತನ್ವೀರ್ ಸೇಠ್, ಶಾಸಕರುಗಳಾದ ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ, ಕೆ.ಹರೀಶ್ ಗೌಡ, ವಿಧಾನಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ಧರಾಮಯ್ಯ, ಡಾ.ಡಿ.ತಿಮ್ಮಯ್ಯ, ಮಾಜಿ ಸಚಿವೆ ಉಮಾಶ್ರೀ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಮುಡಾ ಅಧ್ಯಕ್ಷ ಕೆ.ಮರೀಗೌಡ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಸಂಯೋಜಕ ಎನ್.ಭಾಸ್ಕರ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಮುಖಂಡರುಗಳಾದ ಶಿವಣ್ಣ, ಬಿ.ಎಂ.ರಾಮು, ಎಸ್.ಸಿ.ಬಸವರಾಜು, ಸೇರಿದಂತೆ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.