ಜೆಡಿಎಸ್ ತನ್ನ ಕೊನೆಯ ಕ್ಷಣಗಳನ್ನು ಎಣಿಸುತ್ತಿದೆ : ಗೆಲುವಿನ ಬಳಿಕ ಸಿ.ಪಿ.ಯೋಗೇಶ್ವರ್ ಪ್ರತಿಕ್ರಿಯೆ
"ಎಚ್ಡಿಡಿ, ಎಚ್ಡಿಕೆ ತಮ್ಮ ಪ್ರತಿಷ್ಠೆಗೆ ಮಗನನ್ನೇ ಬಲಿಕೊಟ್ಟಿದ್ದಾರೆ"
ಸಿ.ಪಿ.ಯೋಗೇಶ್ವರ್
ಬೆಂಗಳೂರು : ʼಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿಯವರು ತಮ್ಮ ಪ್ರತಿಷ್ಠೆಗೆ ಮಗನನ್ನೇ ಬಲಿಕೊಟ್ಟಿದ್ದಾರೆʼ ಎಂದು ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದ್ದು, ತೀವ್ರ ಜಿದ್ದಾಜಿದ್ದಿನ ಕಣವಾಗಿದ್ದ ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಗೆಲುವು ಸಾಧಿಸಿದ್ದಾರೆ. ಆದರೆ ಅವರ ಪ್ರತಿಸ್ಪರ್ಧಿಯಾಗಿದ್ದ ನಿಖಿಲ್ ಕುಮಾರಸ್ವಾಮಿ ಸತತ ಮೂರನೇ ಭಾರಿ ಚುನಾವಣಾ ಸೋಲು ಕಂಡಿದ್ದಾರೆ. ಈ ಬೆನ್ನಲ್ಲೇ ಗೆಲುವಿನ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಯೋಗೇಶ್ವರ್, ಮತದಾರರಿಗೆ ಧನ್ಯವಾದ ಹೇಳಿದ್ದಾರೆ.
ʼಕುಮಾರಸ್ವಾಮಿಯವರು ಮನಸ್ಸು ಮಾಡಿದ್ದರೆ ಮಗನನ್ನು ಮಂಡ್ಯದಲ್ಲಿ ಲೋಕಸಭೆ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಬಹುದಿತ್ತು. ಆದರೆ, ಕೇಂದ್ರ ಸಚಿವರಾಗುವ ಬಯಕೆಯಿಂದ ತಾವೇ ಅಲ್ಲಿ ಸ್ಪರ್ಧಿಸಿದರು. ಮಗನನ್ನು ಬಲಿಕೊಟ್ಟರುʼ ಎಂದು ಹೇಳಿದರು.
ʼದೇವೇಗೌಡರಿಗೆ ವಿಶ್ರಾಂತ ಜೀವನ ನಡೆಸಲು ಇದು ಸೂಕ್ತ ಕಾಲ. ಅವರಿಗೆ ವಯಸ್ಸಾಗಿದೆ. ಈ ಕಾರಣದಿಂದ ಅವರನ್ನು ಜನತೆ ಚುನಾವಣೆಯಲ್ಲಿ ತಿರಸ್ಕರಿಸಿದ್ದಾರೆ. ಈ ಚುನಾವಣೆ ಫಲಿತಾಂಶ ಜೆಡಿಎಸ್ ಕೊನೆಯ ಕ್ಷಣಗಳನ್ನು ಎಣಿಸುತ್ತಿದೆ ಎಂಬುದರ ಸಂಕೇತʼ ಎಂದರು.