ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಉಪಚುನಾವಣೆಗೆ ಸಂಬಂಧಿಸಿ ವಿಸ್ತೃತ ಚರ್ಚೆ : ಸಿ.ಟಿ.ರವಿ
ಬೆಂಗಳೂರು : ಮೂರು ವಿಧಾನಸಭಾ ಕ್ಷೇತ್ರಗಳು ಹಾಗೂ ಒಂದು ವಿಧಾನ ಪರಿಷತ್ ಕ್ಷೇತ್ರದ ಉಪ ಚುನಾವಣೆ ಕುರಿತು ಇಂದಿನ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಿದ್ದೇವೆ ಎಂದು ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು.
ಸೋಮವಾರ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಕೋರ್ ಕಮಿಟಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರಗಳಿಗೆ ಯಾವುದೇ ಸಮಯದಲ್ಲಿ ಉಪ ಚುನಾವಣೆ ಘೋಷಣೆ ಆಗಬಹುದು. ಈ ಉಪಚುನಾವಣೆಗಳನ್ನು ಬಿಜೆಪಿ ಸವಾಲಾಗಿ ಸ್ವೀಕರಿಸಿ, ಗೆಲ್ಲುವ ದೃಷ್ಟಿಯಿಂದ ವಿಶೇಷ ಪ್ರಯತ್ನ ಮಾಡಬೇಕು ಎಂಬ ಚರ್ಚೆ ನಡೆದಿದೆ ಎಂದು ತಿಳಿಸಿದರು.
ಕೋಟ ಶ್ರೀನಿವಾಸ ಪೂಜಾರಿ ಪ್ರತಿನಿಧಿಸುತ್ತಿದ್ದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ಅ.21ರಂದು ನಡೆಯಲಿದೆ. ಬಸವರಾಜ ಬೊಮ್ಮಾಯಿ ಎರಡು ಜಿಲ್ಲೆಗಳಿಗೂ ಭೇಟಿ ನೀಡಿ ಆಕಾಂಕ್ಷಿಗಳ ಜೊತೆ ಚರ್ಚಿಸಿ ಮಾಹಿತಿ ಕಲೆ ಹಾಕಿದ್ದಾರೆ. ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಜೆಡಿಎಸ್ ಹಾಗೂ ನಮ್ಮ ಪಕ್ಷದ ಕೇಂದ್ರೀಯ ನಾಯಕರು ಸಮಾಲೋಚನೆ ಮಾಡಿ, ನಿರ್ಣಯ ಕೈಗೊಳ್ಳಲಿ ಎಂದು ಕೋರ್ ಕಮಿಟಿ ನಿರ್ಧರಿಸಿದೆ ಎಂದು ರವಿ ತಿಳಿಸಿದರು.
ರಾಜ್ಯದಲ್ಲಿ ಪ್ರಸಕ್ತ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಲಾಗಿದೆ. ರಾಜ್ಯ ಸರಕಾರದ ವಿರುದ್ಧ ಹೋರಾಟ ನಡೆಸುವ ಕುರಿತು ಚಿಂತನೆ ನಡೆಸಲಾಗಿದೆ. ಜೊತೆಗೆ, ಮುನಿರತ್ನ ಪ್ರಕರಣಕ್ಕೆ ಸಂಬಂಧಿಸಿದಂಥೆ ಎಸ್‍ಐಟಿ ರಚನೆ ಮಾಡಿದ್ದಾರೆ. ಈ ಸರಕಾರ ಪೂರ್ವಗ್ರಹ ಪೀಡಿತವಾಗಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಅವರು ಟೀಕಿಸಿದರು.
ಸಭೆಯಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷದ ನಾಯಕ ಆರ್.ಅಶೋಕ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಪುದುಚೇರಿ ರಾಜ್ಯ ಉಸ್ತುವಾರಿ ನಿರ್ಮಲ್ ಕುಮಾರ್ ಸುರಾಣ ಪಾಲ್ಗೊಂಡಿದ್ದರು ಎಂದು ಅವರು ಮಾಹಿತಿ ನಿಡಿದರು.