ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ: ಅ.15ರಿಂದ ಎರಡು ದಿನಗಳವರೆಗೆ ರಾಜ್ಯದ ಕೆಲ ಭಾಗಗಳಲ್ಲಿ ಚಂಡಮಾರುತ ಸಾಧ್ಯತೆ
ಸಾಂದರ್ಭಿಕ ಚಿತ್ರ (PTI)
ಬೆಂಗಳೂರು: ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಉಂಟಾಗಿರುವ ಚಂಡಮಾರುತ ಮತ್ತು ಅರಬ್ಬೀ ಸುಮುದ್ರದಲ್ಲಿನ ವಾಯುಭಾರ ಕುಸಿತದ ಪರಿಣಾಮ ಅ.15ರಿಂದ ಅ.17 ರವರೆಗೆ ರಾಜ್ಯದ ಕೆಲ ಭಾಗಗಳಲ್ಲಿ ಚಂಡಮಾರುತ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅ.17 ರ ಬೆಳಗ್ಗೆಯಿಂದ ಅ.18ರ ಬೆಳಗಿನಜಾವದವರೆಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೊಡಲಾಗಿದೆ.
ಇದಲ್ಲದೆ ಪ್ರತ್ಯೆಕವಾಗಿ ಅ.15 ರಿಂದ ಅ.17 ರವೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಅ.17 ರಿಂದ ಅ.18ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಸಹ ಅ.17 ರಂದು ಯೆಲ್ಲೋ ಅಲರ್ಟ್ ಇರಲಿದೆ.
ಎರಡು ದಿನ ಲಘು ಮಳೆ: ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಲಘು ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.