ಕಾಂಗ್ರೆಸ್ ಸೇರುವವರಿಗೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು, ಆ. 24: ಜೆಡಿಎಸ್ ನಾಯಕ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಗುರುವಾರ ನಗರದ ಕ್ವೀನ್ಸ್‍ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ. ಒಮ್ಮೆ ಹತ್ತಿದರೆ ಕಡೆಯ ತನಕವೂ ಇರುವಂತಹ ದೃಢ ನಿರ್ಧಾರ ಮಾಡಬೇಕು. ಬಸ್ ಹತ್ತುವುದು, ಇಳಿಯುವುದು ಮಾಡಬಾರದು. ಮಾಡಿದರೆ ಆಗ ನಮ್ಮ ಬೆಲೆಯನ್ನು ನಾವೆ ಕಳೆದುಕೊಳ್ಳುವಂತಾಗುತ್ತದೆ ಎಂದರು.
ಪಕ್ಷದಲ್ಲಿ ಹೆಚ್ಚು ಕಾಲ ಇದ್ದಷ್ಟು ಹಿರಿತನ, ಜವಾಬ್ದಾರಿ ಮತ್ತು ಗೌರವ ಬರುತ್ತದೆ. ಬರುವುದು, ಹೋಗುವುದು ಮಾಡಿದರೆ ನಾಯಕತ್ವಕ್ಕೂ ಧಕ್ಕೆಯಾಗುತ್ತದೆ. ಈ ಮಾತನ್ನು ಕೇವಲ ಇಂದು ಪಕ್ಷ ಸೇರ್ಪಡೆಯಾದ ಶಿವಮೊಗ್ಗ ಜಿಲ್ಲೆಯವರಿಗೆ ಮಾತ್ರ ಹೇಳುತ್ತಿಲ್ಲ, ರಾಜ್ಯದ ಸಮಸ್ತ ಕಾರ್ಯಕರ್ತರು, ಮುಖಂಡರಿಗೆ ಕಿವಿ ಮಾತು ಹೇಳುತ್ತಿದ್ದೇನೆ ಎಂದು ಶಿವಕುಮಾರ್ ತಿಳಿಸಿದರು.
ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆಯುವುದೇ ಒಂದು ಸೌಭಾಗ್ಯ, ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಪಕ್ಷದ ಇತಿಹಾಸವೆ ದೇಶದ ಇತಿಹಾಸ. ಕಾಂಗ್ರೆಸ್ ಪಕ್ಷದ ರಕ್ತ ಸಾಮಾನ್ಯವಾದುದ್ದಲ್ಲ ಈ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಪಕ್ಷ, ಕಾಂಗ್ರೆಸ್ಸಿಗನಾಗುವುದೆಂದರೆ ಅದು ಅಭಿಮಾನದ ಸಂಕೇತ. ಈ ರಾಷ್ಟ್ರ ಧ್ವಜ ಯಾರ ಹೆಗಲ ಮೇಲಿದೆ ಎಂದರೆ ಅದು ಕಾಂಗ್ರೆಸ್ಸಿಗರ ಹೆಗಲ ಮೇಲೆ ಮಾತ್ರ. ನಾವೆಲ್ಲ ಅಭಿಮಾನದಿಂದ ಕಾಂಗ್ರೆಸ್ಸಿಗರು ಎಂದು ಹೇಳಿಕೊಳ್ಳಬೇಕು ಎಂದು ಅವರು ಹೇಳಿದರು.
ಈಗ ನಾವು ಕೊಡುತ್ತಿರುವ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ, ಜನತಾದಳ ಪಕ್ಷಗಳಿಗೆ ನೀಡಲು ಸಾಧ್ಯವಾಯಿತೇ? ಅರಣ್ಯ ಹಕ್ಕು, ಆದಿವಾಸಿಗಳ ಹಕ್ಕು ಸೇರಿದಂತೆ ಅನೇಕ ಕಾನೂನುಗಳನ್ನು ನೀಡಿದ್ದು ನಮ್ಮ ಕಾಂಗ್ರೆಸ್. ದೇಶದ ಎಲ್ಲ ಜಾತಿ, ಧರ್ಮಗಳ ಜನರ ಬದುಕಿನಲ್ಲಿ ಬದಲಾವಣೆ ತಂದಿದ್ದೇವೆ. ಬಂಗಾರಪ್ಪ ಅವರು ಆಶ್ರಯ ಯೋಜನೆಗೆ ಹೊಸ ರೂಪ ನೀಡಿದರು, ಗ್ರಾಮ ದೇವತೆಗಳ ದೇವಾಲಯ ಜೀರ್ಣೋದ್ಧಾರಕ್ಕೆ ಆರಾಧನಾ ಯೋಜನೆ ಪ್ರಾರಂಭ ಮಾಡಿದ್ದೆ ಬಂಗಾರಪ್ಪ ಅವರ ನೇತೃತ್ವದ ಕಾಂಗ್ರೆಸ್ ಸರಕಾರ ಎಂದು ಶಿವಕುಮಾರ್ ಹೇಳಿದರು.
ಇಂದು ಪಕ್ಷ ಸೇರ್ಪಡೆಯಾದ ಆಯನೂರು ಮಂಜುನಾಥ್ ಬಿಜೆಪಿಗೆ ಹೋದರು, ಜೆಡಿಎಸ್ ಸೇರಿದರು. ಆದರೆ ಕಾಂಗ್ರೆಸ್ ಪಕ್ಷದ ಬಗೆಗಿನ ಒಲವು ಅವರನ್ನು ಮತ್ತೆ ಕರೆತಂದಿದೆ. ಪಕ್ಷ ಸೇರುವವರಿಗೆ ಯಾವುದೇ ಸ್ಥಾನಮಾನ ನೀಡುತ್ತೇವೆ ಎನ್ನುವ ಭರವಸೆ ನೀಡಿಲ್ಲ. ಅವರ ಶಕ್ತಿ, ಸಂಘಟನಾ ಸಾಮಥ್ರ್ಯ ನೋಡಿ ಪರಿಗಣಿಸಲಾಗುವುದು. ಯಾರು ಪಕ್ಷದ ಬೆಳವಣಿಗೆಗೆ ತಳಮಟ್ಟದಿಂದ ಕೆಲಸ ಮಾಡಿರುತ್ತಾರೆ ಅವರಿಗೆ ಮೊದಲ ಆದ್ಯತೆ, ಹೊಸದಾಗಿ ಬಂದಿರುವವರು ಹಳಬರನ್ನು ತಳ್ಳಿ ಮುಂದೆ ಬರಲು ನಾನು ಅವಕಾಶ ನೀಡುವುದಿಲ್ಲ ಎಂದು ಅವರು ತಿಳಿಸಿದರು.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೆಲವೊಂದು ಕ್ಷೇತ್ರದಲ್ಲಿ ಸೋಷಿಯಲ್ ಎಂಜಿನಿಯರಿಂಗ್ ತಿಳಿದುಕೊಳ್ಳದೆ ಎಡವಟ್ಟಾಯಿತು. ಲೋಕಸಭೆಯಲ್ಲಿ ಅದನ್ನು ಸರಿಪಡಿಸಿಕೊಳ್ಳುತ್ತೇವೆ. ದೊಡ್ಡಮಟ್ಟದಲ್ಲಿ ಇತರ ಪಕ್ಷದ ನಾಯಕರು, ಮುಖಂಡರು ಕಾಂಗ್ರೆಸ್ ಪಕ್ಷದತ್ತ ಮುಖ ಮಾಡುತ್ತಿದ್ದಾರೆ. ಪಕ್ಷ ಸೇರ್ಪಡೆಯಾದವರು ಇಂದಿನಿಂದಲೆ ತಮ್ಮ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡಲು ಮುಂದಾಗಿ ಎಂದು ಶಿವಕುಮಾರ್ ಕರೆ ನೀಡಿದರು.