ಸಿಟಿ ಸ್ಕ್ಯಾನ್ , ಎಂ.ಆರ್.ಐ ಸ್ಕ್ಯಾನಿಂಗ್ ಮೆಷಿನ್ ಗಳ ಅಳವಡಿಕೆಗೆ ನಿರ್ಧಾರ : ಸಿಎಂ ಸಿದ್ದರಾಮಯ್ಯ
ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಸಿಗಲಿದೆ ಸೌಲಭ್ಯ
ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಹಾಗೂ ಎಂ.ಆರ್.ಐ ಸ್ಕ್ಯಾನಿಂಗ್ ಮೆಷಿನ್ ಗಳ ಅಳವಡಿಕೆಗೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ X ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
" ಸರ್ವರಿಗೂ ಗುಣಮಟ್ಟದ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಹಾಗೂ ಎಂ.ಆರ್.ಐ ಸ್ಕ್ಯಾನಿಂಗ್ ಮೆಷಿನ್ ಗಳ ಅಳವಡಿಕೆಗೆ ನಿರ್ಧರಿಸಲಾಗಿದೆ, ಶುಚಿ ಯೋಜನೆಯಡಿ ಹೆಣ್ಣು ಮಕ್ಕಳಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ ಮಾಡಲಾಗುತ್ತಿದೆ, ಕರ್ನಾಟಕ ರತ್ನ ಪುನೀತ್ ರಾಜ್‍ಕುಮಾರ್ ಅವರ ಹೆಸರಿನಲ್ಲಿ ಹೃದಯ ಜ್ಯೋತಿ ಯೋಜನೆ ಜಾರಿಗೆ ತರಲಾಗುತ್ತಿದೆ. ಸ್ವಸ್ಥ ಸಮಾಜ ನಮ್ಮ ಗುರಿ, ಇದಕ್ಕಾಗಿ ನಾಗರಿಕರಿಗೆ ಸಕಲ ರೀತಿಯ ವೈದ್ಯಕೀಯ ನೆರವನ್ನು ನಾವು ಖಾತ್ರಿಪಡಿಸುತ್ತೇವೆ " ಎಂದು ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.
"ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ.ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶ. ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ.ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ,ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸೋಣ." ಎಂದು -ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.