ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ: ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಜಾಮೀನು
ಮಂಡ್ಯ: ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಜಾಮೀನು ಮಂಜೂರು ಮಾಡಿ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ
ಸ್ಥಳೀಯರಿಬ್ಬರ ಶ್ಯೂರಿಟಿ ಸೇರಿ 2 ಲಕ್ಷ ರೂ ಮೌಲ್ಯದ ಬಾಂಡ್ ನೀಡುವಂತೆ ಹೇಳಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಹಿನ್ನಲೆ
ಡಿ. 24ರಂದು ಶ್ರೀರಂಗಪಟ್ಟಣದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, "ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬರು ಗಂಡಂದಿರು" ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು.
ಇದಕ್ಕೆ ಮುಸ್ಲಿಂ ಸಮುದಾಯ ಆಕ್ರೋಶ ವ್ಯಕ್ತಪಡಿಸಿತ್ತು. ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದರಿಂದ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹ ವ್ಯಕ್ತವಾಗಿದ್ದವು.
ಈ ಬಗ್ಗೆ ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್ ಚಿಕ್ಕನೇರಳೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರ ಪರವಾಗಿ ಹಿರಿಯ ವಕೀಲರಾದ ಎಸ್ ಬಾಲನ್ ವಾದ ಮಂಡಿಸಿದ್ದರು. ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.