ʼಸಚಿವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆʼ ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ದಿನೇಶ್ ಗುಂಡೂರಾವ್ ಪತ್ನಿ ತಬು ರಾವ್ ದೂರು
ಬೆಂಗಳೂರು : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನನ್ನ ಪತಿ ಹಾಗೂ ನಮ್ಮ ಕುಟುಂಬವನ್ನು ಪಾಕಿಸ್ತಾನಕ್ಕೆ, ಹೋಲಿಕೆ ಮಾಡಿ ದೇಶವಿರೋಧಿಗಳು ಎಂದು ಸಾರ್ವಜನಿಕವಾಗಿ ಅವಹೇಳನ ಮಾಡಿ ಭಾವನೆಗಳಿಗೆ ಧಕ್ಕೆ ತಂದಿರುವುದಾಗಿ ಆರೋಪಿಸಿ, ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ತಬು ರಾವ್ ಇಲ್ಲಿನ ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನಾನು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿಯಾಗಿದ್ದು, ಇಬ್ಬರು ಹೆಣ್ಣು ಮಕ್ಕಳೊಂದಿಗೆ ಸಂಜಯ್ ನಗರದಲ್ಲಿ ಕುಟುಂಬ ಸಮೇತ ವಾಸವಾಗಿರುತ್ತೇನೆ. ನಮ್ಮದು ಅಂತರಧರ್ಮೀಯ ವಿವಾಹವಾಗಿದ್ದು, ದೇಶದ ಸಂವಿಧಾನದನ್ವಯ ಸಮಾಜಕ್ಕೆ, ಮಾದರಿಯಾಗುವ ರೀತಿಯಲ್ಲಿ ನಮ್ಮ ಕುಟುಂಬವನ್ನು ನಿರ್ವಹಿಸಿಕೊಂಡು ಬಂದಿದ್ದೇವೆ ಎಂದು ತಬು ರಾವ್ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಎ.6ರಂದು ವಿಜಯಪುರದಲ್ಲಿ ಮಾಧ್ಯಮಗಳಿಗೆ ನೀಡಿರುವ ಪ್ರತಿಕ್ರಿಯೆಯಲ್ಲಿ ಶಾಸಕ ಯತ್ನಾಳ್ ಅವರು ರಾಮೇಶ್ವರ ಕೆಫೆ ಸ್ಫೋಟ ಪ್ರಕರಣದಲ್ಲಿ ವಿಚಾರಣೆಗೊಳಪಟ್ಟ ಬಿಜೆಪಿಯ ಕಾರ್ಯಕರ್ತನ ಪರವಾಗಿ ಸಮರ್ಥನೆ ಮಾಡುವಕೊಳ್ಳುವ ಭರದಲ್ಲಿ ನನ್ನ ಪತಿ ದಿನೇಶ್ ಗುಂಡೂರಾವ್ ಅವರನ್ನು ಟೀಕಿಸಲು ಈ ರೀತಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ‘ದಿನೇಶ್ ಗುಂಡೂರಾವ್ ಅವರ ಮನೇಲಿ ಅರ್ಧ ಪಾಕಿಸ್ತಾನವಿದೆ ದೇಶವಿರೋಧಿ ಹೇಳಿಕೆ ನೀಡುವುದು ಚಟವಾಗಿದೆ' ಎಂದು ಹೇಳಿದ್ದಾರೆ.
ಈ ಹೇಳಿಕೆಯ ಎಲ್ಲಾ ಸುದ್ದಿ ಮಾಧ್ಯಮಗಳಲ್ಲಿ ರಾಜ್ಯಾದ್ಯಂತ ಪ್ರಸಾರವಾಗಿದೆ. ಈ ಸುದ್ದಿಯನ್ನು ಓದಿ ನನ್ನ ಮನಸ್ಸಿಗೆ ನೋವುಂಟಾಗಿದೆ. ರಾಜಕೀಯ ಕಾರಣಗಳಿಗಾಗಿ ನಮ್ಮ ಕುಟುಂಬವನ್ನು ಅವಹೇಳನ ಮಾಡಿ ನಿಂದಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ, ತಂದಿರುತ್ತಾರೆ. ಚುನಾವಣೆಯ ಹಿನ್ನೆಲೆಯಲ್ಲಿ ನಮ್ಮ ಕುಟುಂಬದ ಹೆಸರನ್ನು ಹಾಳು ಮಾಡುವ ದುರುದ್ದೇಶದಿಂದ ಅವಹೇಳನಕಾರಿ ಹೇಳಿಕೆ ನೀಡಿ ನಮ್ಮ ಭಾವನೆಗಳಿಗೆ ನೋವುಂಟು ಮಾಡಿ ಸಾರ್ವಜನಿಕವಾಗಿ ಅವಹೇಳನ ಮಾಡಿರುವ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಬು ರಾವ್ ದೂರಿನಲ್ಲಿ ಮನವಿ ಮಾಡಿದ್ದಾರೆ.