ಕಾರಂತ ಬಡಾವಣೆ ಅಭಿವೃದ್ಧಿಯ ವಿಧಾನಗಳ ವಿವರ ನೀಡಿ: ಬಿಡಿಎಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಡಾ.ಶಿವರಾಮ ಕಾರಂತ ಬಡಾವಣೆಯ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿಗೆ ರೂಪಿಸಿರುವ ವಿಧಾನಗಳ ಕುರಿತು ಮಾಹಿತಿ ನೀಡುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ(ಬಿಡಿಎ) ಹೈಕೋರ್ಟ್ ನಿರ್ದೇಶನ ನೀಡಿದೆ.
ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಭೂ ಸ್ವಾಧೀನ ಸೇರಿದಂತೆ ಶಿವರಾಮ ಕಾರಂತ ಬಡಾವಣೆಗೆ ಸಂಬಂಧಿಸಿದಂತೆ ಮತ್ತಿತರ ವಿಷಯಗಳ ಕುರಿತು ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ವಿಶೇಷ ವಿಭಾಗೀಯ ನ್ಯಾಯಪೀಠ ಬಿಡಿಎಗೆ ಈ ಸೂಚನೆ ನೀಡಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪರ ವಾದಿಸಿದ ರಾಜ್ಯ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ಅವರು, ಬಡಾವಣೆ ಅಭಿವೃದ್ಧಿಗೆ ಎದುರಾಗಿರುವ ಅಡಚಣೆ ಹಾಗೂ ಅವುಗಳ ಪರಿಹಾರಕ್ಕೆ ಬಿಡಿಎ ಕೈಗೊಂಡಿರುವ ಕ್ರಮಗಳನ್ನು ನ್ಯಾಯಪೀಠಕ್ಕೆ ವಿವರಿಸಿದರು.
ಇದೇ ವೇಳೆ ಬಡಾವಣೆ ನಿರ್ಮಾಣ ಕುರಿತ ದೂರುಗಳನ್ನು ಪರಿಹರಿಸಲು ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ತ್ರಿಸದಸ್ಯ ಸಮಿತಿ ರದ್ದುಪಡಿಸಿ ಎಲ್ಲ ಅಹವಾಲುಗಳನ್ನು ತಾನೇ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ಸ್ಪಷ್ಟಪಡಿಸಿತು.
ಸಮಿತಿಯ ವಶದಲ್ಲಿದ್ದ ಸಂಪುಟಗಟ್ಟಲೆ ದಾಖಲೆಗಳನ್ನು ಗಣಕೀಕೃತಗೊಳಿಸಿ ಅವುಗಳನ್ನು ಹೈಕೋರ್ಟ್ ಕಂಪ್ಯೂಟರ್ ವಿಭಾಗಕ್ಕೆ ವರ್ಗಾಯಿಸಲು ಕ್ರಮ ಕೈಗೊಳ್ಳುವಂತೆ ನ್ಯಾಯಾಂಗ ರಿಜಿಸ್ಟ್ರಾರ್ ಅವರಿಗೆ ಸೂಚಿಸಿ ವಿಚಾರಣೆಯನ್ನು ಫೆ.7ಕ್ಕೆ ಮುಂದೂಡಿತು.