ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ: ಡಿ.ಕೆ.ಶಿವಕುಮಾರ್
"ಯಾರೇ ಇರಲಿ, ಹೋಗಲಿ ತನ್ನನ್ನು ತಾನು ಉಳಿಸಿಕೊಳ್ಳುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇದೆ"
ಡಿ.ಕೆ.ಶಿವಕುಮಾರ್
ಬೆಂಗಳೂರು : "ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಖಾರವಾಗಿ ಪ್ರತಿಕ್ರಿಯಿಸಿದರು.
ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.
ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಚರ್ಚೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, "ನಾವು ಮಾಡುವ ಕೆಲಸ, ಶ್ರಮವನ್ನು ಪಕ್ಷದ ನಾಯಕರು ಗುರುತಿಸಿ ಅದಕ್ಕೆ ಸೂಕ್ತವಾಗಿ ಹುದ್ದೆ ನೀಡುತ್ತಾರೆ. ಮಾಧ್ಯಮಗಳ ಮುಖಾಂತರ ಯಾರಾದರೂ ಹುದ್ದೆ ಕೇಳುತ್ತಾರೆಯೇ? ಇದನ್ನೆಲ್ಲಾ ಹೊಸದಾಗಿ ಕೇಳುತ್ತಿರುವೆ" ಎಂದರು.
"ಪಕ್ಷದ ವಿಚಾರದ ವಿಚಾರವಾಗಿ ಯಾವುದೇ ಬೆಳವಣಿಗೆ ಇದ್ದರೂ ನಾನೇ ಮಾಧ್ಯಮಗೋಷ್ಠಿ ಕರೆದು ಮಾಹಿತಿ ನೀಡುತ್ತೇನೆ. ಈಗ ನಮ್ಮ ಪಕ್ಷ ಸಂಘಟನೆ ಮಾಡಿ, ಪಕ್ಷ ಉಳಿಸಿ, ಬೆಳೆಸುವ ಕೆಲಸ ಮಾಡಬೇಕು. ಪಕ್ಷದಲ್ಲಿ ಎಲ್ಲರೂ ಶಿಸ್ತು ಕಾಪಾಡಬೇಕು ಎಂದು ನಮ್ಮ ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಬುದ್ಧಿವಾದ ಹೇಳಿದ್ದಾರೆ. ಯಾವುದೇ ವಿಚಾರವಾಗಿ ಬಹಿರಂಗವಾಗಿ ಚರ್ಚೆ ಮಾಡದಂತೆ ಸೂಚಿಸಿದ್ದಾರೆ" ಎಂದು ತಿಳಿಸಿದರು.
ಮಾಧ್ಯಮಗಳ ಮುಂದೆ ಹೇಳಿಕೆಯಿಂದ ಪ್ರಯೋಜನವಿಲ್ಲ:
"ಪಕ್ಷದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂತಹದ್ದಲ್ಲ. ಏನೇ ಇದ್ದರೂ ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ, ಮುಖ್ಯಮಂತ್ರಿ ಅಥವಾ ನನ್ನ ಬಳಿ ಬಂದು ಮಾತನಾಡಲಿ. ಇದು ಕೇವಲ ಕಾಂಗ್ರೆಸ್ ಮಾತ್ರವಲ್ಲ. ಬಿಜೆಪಿ, ಜೆಡಿಎಸ್, ರೈತ ಸಂಘ ಸೇರಿದಂತೆ ಯಾವುದೇ ಪಕ್ಷವಾದರೂ ಪಕ್ಷದ ವಿಚಾರವನ್ನು ಆಂತರಿಕವಾಗಿ ಚರ್ಚೆ ಮಾಡಬೇಕು ಎಂದು ಹೇಳುತ್ತೇನೆ. ನಾನು ಯಾವುದಾದರೂ ಹುದ್ದೆ ಬಯಸಿದರೆ ನೀವು (ಮಾಧ್ಯಮಗಳು) ಆ ಸ್ಥಾನ ನನಗೆ ಕೊಡಿಸುತ್ತೀರಾ? ಅಥವಾ ಈ ಹುದ್ದೆಗಳು ಅಂಗಡಿಯಲ್ಲಿ ಸಿಗುತ್ತದೆಯೇ? ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಯಾವುದೇ ಪ್ರಯೋಜನವಿಲ್ಲ. ಬದಲಿಗೆ ಇದರಿಂದ ವ್ಯತಿರಿಕ್ತ ಪರಿಣಾಮ ಬೀರುತ್ತದೆ" ಎಂದು ಹೇಳಿದರು.
ಯಾರೇ ಇರಲಿ, ಹೋಗಲಿ ಪಕ್ಷ ಇರುತ್ತದೆ :
"ಈ ಪಕ್ಷವನ್ನು ಕೇವಲ ಡಿ.ಕೆ.ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿಲ್ಲ. ಕಾರ್ಯಕರ್ತರು, ಮತದಾರರು ನಮ್ಮ ಮೇಲೆ ಅಪಾರವಾದ ವಿಶ್ವಾಸ ಇಟ್ಟು ನಮಗೆ ಅಧಿಕಾರ ನೀಡಿದ್ದಾರೆ. ಇದನ್ನು ನಾವು ಉಳಿಸಿಕೊಳ್ಳಬೇಕು, ಉಳಿಸಿಕೊಳ್ಳುತ್ತೇವೆ. ಇದು ಕಾರ್ಯಕರ್ತರ ಹಾಗೂ ಮತದಾರರ ಪಕ್ಷ. ಇದಕ್ಕೆ ತನ್ನದೇ ಆದ ದೊಡ್ಡ ಇತಿಹಾಸವಿದೆ. ಯಾರೇ ಇರಲಿ, ಹೋಗಲಿ ತನ್ನನ್ನು ತಾನು ಉಳಿಸಿಕೊಳ್ಳುವ ಶಕ್ತಿ ಈ ಪಕ್ಷಕ್ಕೆ ಇದೆ ಎಂದು ತಿಳಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಶ್ನೆ ಮಾಡುವುದು ಸರಿಯಲ್ಲ :
ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ಕುರಿತು ಪ್ರತಿಕ್ರಿಯಿಸದ ಅವರು "ಈ ಬಗ್ಗೆ ಸ್ಪಷ್ಟನೆ ನೀಡಬೇಕಿರುವುದು ನಾನಲ್ಲ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು. ಈ ವಿಚಾರವಾಗಿ ಅವರ ಬಳಿ ಕೇಳಿ. ಅವರ ನಿರ್ಧಾರವನ್ನು ಪ್ರಶ್ನೆ ಮಾಡಲಾಗುತ್ತಿದೆ. ಈ ರೀತಿ ಮಾಡಬಾರದು" ಎಂದು ತಿಳಿಸಿದರು.