ಬಿಜೆಪಿಯವರು ನೂರು ಜನ್ಮ ಎತ್ತಿ ಬಂದರೂ ʼಗ್ಯಾರಂಟಿʼ ಯೋಜನೆ ನಿಲ್ಲುವುದಿಲ್ಲ : ಡಿ.ಕೆ.ಶಿವಕುಮಾರ್
PC: x/@DKShivakumar
ಬೆಂಗಳೂರು : “ಬಿಜೆಪಿಯವರು ನೂರು ಜನ್ಮ ಎತ್ತಿಬಂದರೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಕಾಂಗ್ರೆಸ್ ಜನಸಂಪರ್ಕ ಕೇಂದ್ರ ಉದ್ಘಾಟನೆ ಮಾಡಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಇಂದಿರಾ ಗಾಂಧಿ ಅವರು ವೃದ್ಧಾಪ್ಯ, ವಿಧವಾ ವೇತನ, ಬ್ಯಾಂಕ್ ರಾಷ್ಟ್ರೀಕರಣ, ಉಳುವವನಿಗೆ ಭೂಮಿ ಯೋಜನೆ ಜಾರಿಗೆ ತಂದರು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ರೈತರ ಪಂಪ್ ಸೆಟ್ ಗೆ 10 ಹೆಚ್.ಪಿ ಉಚಿತ ವಿದ್ಯುತ್, ಕೃಷ್ಣ ಅವರ ಕಾಲದಲ್ಲಿ ಸ್ತ್ರೀಶಕ್ತಿ ಸಂಘ ಯೋಜನೆ ಜಾರಿಗೆ ಬಂದಿತು. ಇದರಲ್ಲಿ ಯಾವುದಾದರೂ ಒಂದು ಯೋಜನೆಯನ್ನು ನಿಲ್ಲಿಸಲಾಗಿದೆಯೇ? ಬಡವರಿಗೆ ನಿವೇಶನ, ಮನೆ ನೀಡುವ ಯೋಜನೆ ನಿಂತಿದೆಯೇ? ಇಲ್ಲ. ಅದೇ ರೀತಿ ಬಿಜೆಪಿಯವರು ನೂರು ಜನ್ಮ ತಳೆದರೂ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಇದೇ ಕಾಂಗ್ರೆಸ್ ಪಕ್ಷದ ಶಕ್ತಿ” ಎಂದು ವಾಗ್ದಾಳಿ ನಡೆಸಿದರು.
“ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದವರು ಅಧಿಕಾರಕ್ಕೆ ಬಂದಂತೆ. ಬಿಜೆಪಿಯವರೂ ಈ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಹಾಗಿದ್ದರೆ ಅಶೋಕ್ ಅವರು ತಮ್ಮ ಕಾರ್ಯಕರ್ತರಿಗೆ ಹೇಳಿ ಈ ಗ್ಯಾರಂಟಿ ಯೋಜನೆ ಪ್ರಯೋಜನ ಪಡೆಯದಂತೆ ಸಲಹೆ ನೀಡಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಸಂವಿಧಾನವೇ ನೀಡಿದೆ. ವಿರೋಧ ಪಕ್ಷದ ನಾಯಕರ ಕ್ಷೇತ್ರದಿಂದಲೇ ಈ ಗ್ಯಾರಂಟಿ ಯೋಜನೆಗಳ ಸಮಿತಿಯನ್ನು ಕಚೇರಿ ಉದ್ಘಾಟನೆ ಮಾಡಿದ್ದೇವೆ, ಮುಂದಿನ ದಿನಗಳಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲೂ ಚಾಲನೆ ನೀಡಲಾಗುವುದು” ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕುವ ಉದ್ದೇಶವಿಲ್ಲ:
ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕಬೇಕು ಎಂದು ಸಚಿವರು ಮನವಿ ಮಾಡಿರುವ ಬಗ್ಗೆ ಮಾಧ್ಯಮ ವರದಿ ಕುರಿತು ಕಾರ್ಯಕ್ರಮದ ನಂತರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಮಾಧ್ಯಮಗಳಲ್ಲಿ ಬಂದಿರುವ ವರದಿ ಸುಳ್ಳು. ಪಕ್ಷದ ಅಧ್ಯಕ್ಷನಾದ ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ಯಾರಂಟಿ ಯೋಜನೆಗಳನ್ನು ಬದಲಿಸುವ ಅಥವಾ ಕತ್ತರಿ ಹಾಕುವ ಉದ್ದೇಶವಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇವೆ. ಆದಾಯ ಹೆಚ್ಚಾಗಿರುವವರು, ತೆರಿಗೆ ಪಾವತಿದಾರರು ಕೂಡ ಈ ಯೋಜನೆ ಪಡೆಯುತ್ತಿದ್ದಾರೆ ಎಂದು ಕೆಲವರು ದೂರಿದ್ದಾರೆ. ಅಂತಹ ಪ್ರಕರಣಗಳ ಪರಿಶೀಲನೆ ಮಾಡಲಾಗುವುದು. ಈ ಫಲಾನುಭವಿಗಳ ಗುರುತಿನ ಚೀಟಿ ವಿತರಣೆಗೆ ನಾವು ಆಲೋಚನೆ ನಡೆಸುತ್ತಿದ್ದೇವೆ. ನಮ್ಮ ಗ್ಯಾರಂಟಿ ಸಮಿತಿ ಈ ವಿಚಾರವಾಗಿ ಪರಿಶೀಲನೆ ಮಾಡಲಿದೆ. ನಮ್ಮ ಬಜೆಟ್ ನಲ್ಲಿ ಈ ಯೋಜನೆಗಳಿಗೆ 56 ಸಾವಿರ ಕೋಟಿ ರೂ. ಮೀಸಲಿಡಲಾಗಿದ್ದು, ಶಕ್ತಿ ಯೋಜನೆ ನಂತರ ಜನರ ಅನುಕೂಲಕ್ಕೆ ಸಾರಿಗೆ ಇಲಾಖೆ ಸಾವಿರಾರು ಹೊಸ ಬಸ್ ಖರೀದಿ ಮಾಡುತ್ತಿದೆ. ರಾಜ್ಯದಲ್ಲಿ ಬಸ್ ಪ್ರಯಾಣದ ಪ್ರಮಾಣ ಹೆಚ್ಚಾಗಿದೆ. ಸಾರಿಗೆ ಸಂಸ್ಥೆಗಳ ಆದಾಯ ಹೆಚ್ಚಾಗಿದೆ” ಎಂದು ತಿಳಿಸಿದರು.