ದೊಡ್ಡಬಳ್ಳಾಪುರ | ಗೋ ಮಾಂಸ ಸಾಗಾಟ ಆರೋಪ: ಶ್ರೀರಾಮ ಸೇನೆಯಿಂದ ಕಾರಿಗೆ ಬೆಂಕಿ
ದೊಡ್ಡಬಳ್ಳಾಪುರ, ಸೆ.23: ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ವಾಹನಗಳನ್ನು ತಡೆದ ಶ್ರೀರಾಮಸೇನೆ ಕಾರ್ಯಕರ್ತರು ಕಾರೊಂದಕ್ಕೆ ಬೆಂಕಿ ಹಚ್ಚಿದ ಘಟನೆ ದೊಡ್ಡಬಳ್ಳಾಪುರ ನಗರದಲ್ಲಿ ಇಂದು ಮುಂಜಾನೆ 5:30ರ ಸುಮಾರಿಗೆ ನಡೆದಿರುವುದು ವರದಿಯಾಗಿದೆ.
ಆಂಧ್ರ ಪ್ರದೇಶದಿಂದ ಗೋಮಾಂಸವನ್ನು ಯಲಹಂಕ ರಾಜ್ಯ ಹೆದ್ದಾರಿ ಮಾರ್ಗವಾಗಿ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಲ್ಲಿ ಐದು ವಾಹನಗಳನ್ನು ಶ್ರೀ ರಾಮ ಸೇನೆ ಕಾರ್ಯಕರ್ತರು ದೊಡ್ಡಬಳ್ಳಾಪುರ ನಗರದ ಐಬಿ ವೃತ್ತದ ಬಳಿ ಇಂದು ಬೆಳಗ್ಗೆ ತಡೆದಿದ್ದಾರೆ. ಈ ವೇಳೆ ವಾಹನಗಳಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಆ ವಾಹನ ಚಾಲಕರ ತಲೆಯ ಗೋಮಾಂಸವನ್ನು ಇಟ್ಟು ಪ್ರವಾಸಿ ಮಂದಿರ ವೃತ್ತದಲ್ಲಿ ಮೆರವಣಿಗೆ ಮಾಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕಾರೊಂದಕ್ಕೆ ಶ್ರೀರಾಮ ಸೇನೆ ಕಾರ್ಯಕರ್ತರು ಬೆಂಕಿ ಹಚ್ಚಿದ್ದು, ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
ಈ ಘಟನೆಯಿಂದ ಸ್ಥಳದಲ್ಲಿ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪುಗೂಡಿದ್ದ ಜನರನ್ನು ಚದುರಿಸಿದ್ದಾರೆ.
ಗೋ ಮಾಂಸ ಸಾಗಾಟ ಮಾಡುತ್ತಿದ್ದ ಐದು ವಾಹನ ಹಾಗೂ ಅವುಗಳ ಚಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಘಟನೆಯ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಪ್ರಕರಣ ದಾಖಲು:
ಘಟನೆ ಸಂಬಂಧ ಶ್ರೀರಾಮಸೇನೆಯ ಅಧ್ಯಕ್ಷ ಪವನ್‍ಸ್ವಾಮಿ ದೂರು ನೀಡಿದ್ದು, ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಲ್ಕೈದು ವಾಹನಗಳಲ್ಲಿ ಸುಮಾರು 30 ಟನ್ ಗೋಮಾಂಸವನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ. ಗೋಮಾಂಸ ನಿಷೇಧವಿದ್ದರೂ ಗೋವುಗಳನ್ನು ಹತ್ಯೆ ಮಾಡಿ ಬೆಂಗಳೂರು ಹಾಗೂ ಇತರೆ ಜಿಲ್ಲೆಗಳಿಗೆ ಸಾಗಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿದೆ. ಅಲ್ಲದೆ, ವಾಹನಗಳನ್ನು ತಡೆದು ಬೆಂಕಿ ಹಚ್ಚಿದ್ದ ಘಟನೆಯನ್ನು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಶ್ರೀರಾಮಸೇನೆ ಕಾರ್ಯಕರ್ತರ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದನದ ಮಾಂಸ ಸಾಗಾಟ ಆರೋಪಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದಿರುವ ಪೈಕಿ ಇಬ್ಬರು ಕರ್ನಾಟಕ ರಾಜ್ಯದವರಾಗಿದ್ದು, ಉಳಿದ 5 ಮಂದಿ ಆಂಧ್ರಪ್ರದೇಶದ ಹಿಂದೂಪುರ ಮೂಲದವರೆಂದು ತಿಳಿದು ಬಂದಿದೆ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಅಲ್ಲದೆ, ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧ ಶ್ರೀರಾಮಸೇನೆಯ 16 ಮಂದಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’
-ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಬೆಂಗಳೂರು ಗ್ರಾಮಾಂತರ