ಪ್ರತಿ ಗ್ರಾಪಂ ಕಚೇರಿಗೆ ಸ್ವಂತ ಕಟ್ಟಡ; ಸೌಲಭ್ಯವಿಲ್ಲದ ಕಚೇರಿಗಳ ಮಾಹಿತಿ ಸಂಗ್ರಹ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು, ಅ.19: ರಾಜ್ಯದಲ್ಲಿ ಸ್ವಂತ ಕಟ್ಟಡಗಳ ಸೌಲಭ್ಯವಿಲ್ಲದ ಗ್ರಾಮ ಪಂಚಾಯತ್ ಕಚೇರಿಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದ್ದು, ಇಂತಹ ಸ್ಥಳಗಳಲ್ಲಿ ಕಟ್ಟಡಗಳನ್ನು ನಿರ್ಮಾಣ ಮಾಡುವ ಸಲುವಾಗಿ ನರೇಗಾ ಯೋಜನೆಯಡಿ 20 ಲಕ್ಷ ರೂ.ಗಳ ಜೊತೆಗೆ ಮತ್ತಷ್ಟು ಅನುದಾನ ಒದಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬುಧವಾರ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದ ಕಚೇರಿಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಭವಿಷ್ಯದ ದೃಷ್ಟಿಯನ್ನಿರಿಸಿಕೊಂಡು ಗ್ರಾಮ ಪಂಚಾಯತಿಗಳ ಸದಸ್ಯರ ಸಂಖ್ಯೆಗೆ ಅನುಗುಣವಾಗುವಂತೆ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಸರಕಾರದ ಗೋಮಾಳ ಭೂಮಿಯನ್ನು ಸಂರಕ್ಷಿಸುವ ಸಲುವಾಗಿ ಅಂತಹ ಸ್ಥಳಗಳಲ್ಲಿ ನರೇಗಾ ಕಾರ್ಯಕ್ರಮದಡಿ ಗಿಡಗಳನ್ನು ನೆಟ್ಟು ಪೋಷಿಸಬೇಕು. ಗ್ರಾಮ ಪಂಚಾಯತಿಗಳಿಗೆ ಆಯ್ಕೆಯಾಗಿರುವ ಮಹಿಳಾ ಪ್ರತಿನಿಧಿಗಳ ಸಬಲೀಕರಣಕಾಗಿ ಪುನಶ್ಚೇತನ, ನಾಯಕತ್ವ ಕುರಿತಂತೆ ತರಬೇತಿ ನೀಡುವುದರೊಂದಿಗೆ ಲೆಕ್ಕ ನಿರ್ವಹಣೆ ಸೇರಿದಂತೆ ಹಣಕಾಸು ವ್ಯವಸ್ಥೆಯ ಬಗ್ಗೆ ಅರಿವು ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಅವರು ಹೇಳಿದರು.
ರಾಜ್ಯದ ಬಹುಪಾಲು ಗ್ರಾಮಗಳಲ್ಲಿ ಅಳವಡಿಸಲಾಗಿರುವ ಶುದ್ಧ ನೀರಿನ ಘಟಕಗಳ ನಿರ್ವಹಣೆಗಾಗಿ ಪ್ರತಿಷ್ಠಿತ ಸಂಸ್ಥೆಗಳೊಂದಿಗೆ ಚರ್ಚೆ ನಡೆಸಿ ವಾರ್ಷಿಕ ನಿರ್ವಹಣೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು. ಪ್ರತಿ ಗ್ರಾಮದಲ್ಲಿಯೂ ಲಭ್ಯವಿರುವ ನೀರಿನ ಮೂಲವನ್ನು ಸಂಗ್ರಹಿಸಲು ನಡೆಸಲಾಗುತ್ತಿರುವ ನೀರಿನ ಆಡಿಟ್ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಅಂತರ್ಜಲದ ಮಟ್ಟ ಪರಿಶೀಲನೆಗೆ ತಜ್ಞರ ಸಮಿತಿ ರಚಿಸಬೇಕು. ಆ ಸಮಿತಿಯಲ್ಲಿ ವಿವಿಧ ಕ್ಷೇತ್ರಗಳ ಮತ್ತಷ್ಟು ತಜ್ಞರನ್ನು ಸೇರಿಸಿಕೊಳ್ಳಬೇಕು ಎಂದು ತಿಳಿಸಿದ ಅವರು, ರಾಜ್ಯದಲ್ಲಿ 7100 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿ ಮಾಡಲು ಪ್ರಸ್ತಾವನೆ ಸಲ್ಲಿಸಲು ರಾಜ್ಯ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದರು.