ವಿದ್ಯಾವಂತರೇ ಹೆಚ್ಚು ಮೌಢ್ಯವಂತರು, ಜಾತಿವಾದಿಗಳಾಗುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ ಕಳವಳ
ಬೆಂಗಳೂರು, ಜು.8: ಮಕ್ಕಳು ವಿಶ್ವಪ್ರಜ್ಞೆ ಬೆಳೆಸಿಕೊಂಡು ವೈಚಾರಿಕವಾಗಿ ಸನ್ನದ್ಧಗೊಳ್ಳುವ ನಿಟ್ಟಿನಲ್ಲಿ ಸರಕಾರ ಕೆಲಸ ಮಾಡಲಿದೆ. ಬೋಧಕರು ಜಾತ್ಯತೀತವಾಗಿಲ್ಲದಿದ್ದರೆ, ಶಿಕ್ಷಕರಲ್ಲೇ ವೈಚಾರಿಕತೆ ಇಲ್ಲದಿದ್ದರೆ ಮಕ್ಕಳಲ್ಲಿ ಜ್ಞಾನದ ವಿಕಾಸ ಸಾಧ್ಯವಾಗುವುದಿಲ್ಲ. ಆದರೆ, ಇಂದು ವಿದ್ಯಾವಂತರೇ ಹೆಚ್ಚು ಮೌಢ್ಯವಂತರು, ಜಾತಿವಾದಿಗಳಾಗುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ಶನಿವಾರ ವಸಂತನಗರದ ದೇವರಾಜ ಅರಸು ಭವನದಲ್ಲಿ ನಡೆದ ‘ಪ್ರಬುದ್ಧ ಕರ್ನಾಟಕ’ ಜನಮನ ಸಮಾವೇಶದ ಸಂವಾದದಲ್ಲಿ ಮಾತನಾಡಿದ ಅವರು, 'ಜಾಗತಿಕ ಮಟ್ಟದ ಬಂಡವಾಳವನ್ನು ಆಕರ್ಷಿಕಸಲು ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಉದ್ಯಮ ಸ್ನೇಹಿ ವಾತಾವರಣ ಇರಬೇಕು. ಬಂಡವಾಳ ಹೂಡಿಕೆಯಿಂದ ಉದ್ಯೋಗ ಸೃಷ್ಟಿಯಾಗಿ ಜಿಡಿಪಿ ಹೆಚ್ಚುತ್ತದೆ. ಹೀಗಾಗಿ ಜಾತಿ-ಧರ್ಮದ ಸಂಘರ್ಷ ಇಲ್ಲದ ಶಾಂತಿಯುತ ಸಮಾಜ ನಿರ್ಮಿಸಬೇಕು' ಎಂದು ತಿಳಿಸಿದರು.
ಯುವ ಸಮೂಹದ ಶಕ್ತಿ ಮತ್ತು ಚೈತನ್ಯ ದುರುಪಯೋಗವಾಗಬಾರದು, ಜಾತಿ-ಧರ್ಮದ ಹೆಸರಲ್ಲಿ ಗಲಭೆಗಳಿಗೆ ಯುವ ಸಮೂಹ ದುರ್ಬಳಕೆ ಆಗುವುದನ್ನು ತಪ್ಪಿಸುವ ರೀತಿಯಲ್ಲಿ ಸರಕಾರ ನೀತಿ ರೂಪಿಸಿದೆ. ಇದಕ್ಕಾಗಿ ಕೌಶಲ್ಯ ತರಬೇತಿ ಜತೆಗೆ ನಿರುದ್ಯೋಗಿ ಯುವ ಸಮೂಹಕ್ಕೆ 24 ತಿಂಗಳ ಕಾಲ ಯುವನಿಧಿ ನೀಡಲು ನಿರ್ಧರಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.