2ನೇ ಹಂತದ 14 ಕ್ಷೇತ್ರಗಳ ಚುನಾವಣೆ | ರಾಜ್ಯದ 34,110 ಮಂದಿ ಮನೆಯಿಂದಲೇ ಮತದಾನ
ಸಾಂದರ್ಭಿಕ ಚಿತ್ರ (PTI)
ಬೆಂಗಳೂರು : ಎರಡನೆ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳಲ್ಲಿ 85 ವರ್ಷ ಮೇಲ್ಪಟ್ಟ, ನೋಂದಾಯಿತ ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಸೇರಿ 34,110 ಮಂದಿ ಮನೆಯಿಂದ ಮತದಾನ ಮಾಡಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಈ ಚುನಾವಣೆಯಲ್ಲಿ 85 ವರ್ಷ ಮೇಲ್ಪಟ್ಟ ಒಟ್ಟು 23,213 ಜನರು ನೋಂದಣಿ ಮಾಡಿಕೊಂಡಿದ್ದು, ಆಪೈಕಿ 21,892 ವೃದ್ಧರು ತಮ್ಮ ಹಕ್ಕು ಚಲಾಯಿಸಿದ್ದಾರೆ. 10,897ಮಂದಿ ವಿಕಲಚೇತನರು ನೋಂದಾಯಿಸಿಕೊಂಡಿದ್ದು, ಇದರಲ್ಲಿ 10,566 ಮಂದಿ ಮತ ಚಲಾಯಿಸಿದ್ದಾರೆ ಎಂದು ಆಯೋಗ ತಿಳಿಸಿದೆ.
ಮೇ 3ರ ವರೆಗೆ ಪ್ರತಿದಿನ ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ಮತದಾನ ಮಾಡಬಹುದಾಗಿದೆ. ಎರಡನೇ ಹಂತದಲ್ಲಿ ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಬೀದರ್, ವಿಜಯಪುರ (ಎಸ್ಸಿ), ಕಲಬುರಗಿ (ಎಸ್ಸಿ), ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬಳ್ಳಾರಿ(ಎಸ್ಟಿ), ರಾಯಚೂರು(ಎಸ್ಟಿ), ಹಾಗೂ ಕೊಪ್ಪಳ ಲೋಕಸಭಾ ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ.
ರಾಜ್ಯದ ಗಮನ ಸೆಳೆದಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರ, ಪಕ್ಷೇತರರಾಗಿ ಕೆ.ಎಸ್.ಈಶ್ವರಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಸ್ಪರ್ಧೆ ಮಾಡಿರುವುದರಿಂದ ಚುನಾವಣಾ ಕಣವು ರಂಗೇರಿದೆ. ಅದೇ ರೀತಿ ದಾವಣಗೆರೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪತ್ನಿ ಪ್ರಭಾ ಮಲ್ಲಿಕಾರ್ಜುನ್, ಸಂಸದ ಸಿದ್ದೇಶ್ವರ್ ಪತ್ನಿ ಗಾಯತ್ರಿ ಸಿದ್ದೇಶ್ವರ್, ಬಳ್ಳಾರಿಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮಲು, ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬೀದರ್ ನಲ್ಲಿ ಕೇಂದ್ರ ಸಚಿವ ಭಗವಂತ್ ಖೂಬಾ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.
ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅಳಿಯ ರಾಧಾಕೃಷ್ಣನ್, ಚಿಕ್ಕೋಡಿಯಿಂದ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ, ಬೆಳಗಾವಿಯಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್, ಬೀದರ್ ನಿಂದ ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಚುನಾವಣಾ ಆಖಾಡದಲ್ಲಿದ್ದಾರೆ.