ವಿದ್ಯುತ್ ಕಳವು ಆರೋಪ: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಎಫ್ಐಆರ್
ಬೆಂಗಳೂರು: ವಿದ್ಯುತ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಸ್ಕಾಂ ಅಧಿಕಾರಿಯೊಬ್ಬರ ದೂರಿನ ಆಧಾರದಲ್ಲಿ ಜಯನಗರ ಬೆಸ್ಕಾಂ ಜಾಗೃತ ದಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯುತ್ ಸಂಪರ್ಕವನ್ನು ಪಡೆದುಕೊಳ್ಳುವುದು ಕಾನೂನು ಬಾಹಿರವಾಗಿದ್ದು, ಈ ಹಿನ್ನೆಲೆಯಲ್ಲಿ 2003 ರ ವಿದ್ಯುತ್ ಕಾಯ್ದೆಯ ಸೆಕ್ಷನ್ 135 ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಕುಮಾರಸ್ವಾಮಿ ಅವರ ಸ್ಪಷ್ಟನೆ: ''ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ'' ಎಂದು ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದರು.