ಎತ್ತಿನಹೊಳೆ ಯೋಜನೆ | ಮಾಸಾಂತ್ಯಕ್ಕೆ ನೀರೆತ್ತಲು ಪ್ರಾಯೋಗಿಕ ಚಾಲನೆ : ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ‘ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನು ಅನುದಾನ ಲಭ್ಯತೆಯನ್ನು ಆಧರಿಸಿ 2027ರ ಮಾರ್ಚ್ 31ಕ್ಕೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಸುರೇಶ್ ಗೌಡ ಬಿ. ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಯೋಜನೆಯಡಿ ಮುಂಗಾರು ಮಳೆ ಅವಧಿಯಲ್ಲಿ 24 ಟಿಎಂಸಿ ಪ್ರಮಾಣದ ಪ್ರವಾಹದ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ನೀರು ಹರಿಸಲು ಯೋಜಿಸಲಾಗಿದೆ ಎಂದು ಹೇಳಿದರು.
ಯೋಜನೆಯಿಂದ ಚಿತ್ರದುರ್ಗ ಜಿಲ್ಲೆಗೆ ನೀರು ಹರಿಸಲು ಉದ್ದೇಶಿಸಿಲ್ಲ. ಎಲ್ಲ ಲಿಫ್ಟ್ ಕಾಮಗಾರಿಗಳನ್ನು ಪೂರ್ಣಗೊಳಿಸಿ ಜುಲೈ ಅಂತ್ಯಕ್ಕೆ ನೀರನ್ನೆತ್ತಿ ಪ್ರಾಯೋಗಿಕವಾಗಿ ಚಾಲನೆಗೊಳಿಸಿ ಗುರುತ್ವ ಕಾಲುವೆಯ ಸರಪಳಿ 42 ಕಿ.ಮೀ. ವರೆಗೆ ನೀರು ಹರಿಸಲು ಉದ್ದೇಶಿಸಲಾಗಿದೆ. ನವೆಂಬರ್ ಅಂತ್ಯಕ್ಕೆ ಗುರುತ್ವ ಕಾಲುವೆ ಸರಪಳಿ 42 ಕಿ.ಮೀ.ನಿಂದ 231 ಕಿ.ಮೀ. ತುಮಕೂರು ವರೆಗೆ ನಾಲೆಗೆ ನೀರನ್ನು ಹರಿಸುವುದು ಮತ್ತು ಲಕ್ಕೇನಹಳ್ಳಿ ಸಮತೋಲನಾ ಜಲಾಶಯದ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.
2026ರ ನವೆಂಬರ್ ಅಂತ್ಯಕ್ಕೆ ಲಕ್ಕೇನಹಳ್ಳಿಗ ಸಮತೋಲನಾ ಜಲಾಶಯದ ಬಾಕಿ ಶೇ.50ರಷ್ಟು ಕಾಮಗಾರಿ ಪೂರ್ಣಗೊಳಿಸಲಾಗುವುದು. ನಂತರ ಎಲ್ಲ ಪೀಡರ್ ಕಾಮಗಾರಿಗಳನ್ನು ಪೂರ್ಣಗೊಳಿಸಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ನೀರನ್ನು ಒದಗಿಸಲಾಗುವುದು ಎಂದು ಹೇಳಿದರು.