ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ: 14 ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್
ಸಾಂದರ್ಭಿಕ ಚಿತ್ರ
ಬೆಂಗಳೂರು: ಗೃಹ ಸಚಿವರ ನಿವಾಸದ ಬಳಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಯುವ ಮೋರ್ಚಾದ 14 ಮಂದಿ ಕಾರ್ಯಕರ್ತರ ವಿರುದ್ಧ ಐಪಿಸಿ ಸೆಕ್ಷನ್ 143, 149 (ಕಾನೂನು ಬಾಹಿರವಾಗಿ ಒಗ್ಗೂಡುವಿಕೆ) ಆರೋಪದಡಿ ಸದಾಶಿವನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆಯ ಕೆಲವು ಆರೋಪಿಗಳ ಕುರಿತ ಹಾಗೂ ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಬಗ್ಗೆ ನೀಡಿರುವ ಹೇಳಿಕೆಯನ್ನು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಹಿಂಪಡೆಯಬೇಕೆಂದು ಆಗ್ರಹಿಸಿ ಗುರುವಾರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.
ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಸದಾಶಿವನಗರದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಸದಾಶಿವನಗರ ಠಾಣಾ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ಇದೇ ವೇಳೆ, ಪರಮೇಶ್ವರ್ ಅವರು ತಮ್ಮ ಮಾತು ಹಿಂಪಡೆಯಬೇಕು. ಕಾಂಗ್ರೆಸ್ ಸರಕಾರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿರುವ ಕಿರಾತಕರು, ಭಯೋತ್ಪಾದಕರಿಗೆ ಬೆಂಬಲ ಕೊಡುತ್ತಿದೆ. ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಮಾಡುತ್ತೇವೆ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದರು.