ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ
ವಿಜಯವಾಡ: ಭ್ರಷ್ಟಾಚಾರ ಮಾಡಿದ ಆರೋಪದ ಮೇಲೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಶನಿವಾರ ಮುಂಜಾನೆ ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಚಂದ್ರಬಾಬು ನಾಯ್ಡು ಅವರು ತಮ್ಮ ಅಧಿಕಾರಾವಧಿಯಲ್ಲಿ ಆಂಧ್ರಪ್ರದೇಶ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದಲ್ಲಿ 317 ಕೋಟಿ ರೂಪಾಯಿ ಹಗರಣ ಮಾಡಿದ್ದಾರೆಂಬ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.
ನಾಯ್ಡು ಅವರನ್ನು ಬಂಧಿಸಲು ಶುಕ್ರವಾರ ತಡರಾತ್ರಿ ವಾರೆಂಟ್ ಜೊತೆ ಬಂದ ಅಧಿಕಾರಿಗಳನನು ನಾಯ್ಡು ಬೆಂಬಲಿಗರು ತಡೆದಿದ್ದು, ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ಮತ್ತು ನಾಯ್ಡು ಬೆಂಬಲಿಗರ ನಡುವೆ ಸಣ್ಣ ಪ್ರಮಾಣ ಘರ್ಷಣೆಯೂ ನಡೆದಿದೆ ಎನ್ನಲಾಗಿದೆ. ನಾಯ್ಡು ಬೆಂಬಲಿಗರು ಪ್ರತಿಭಟನೆ ನಡೆಸಿದ್ದರಿಂದ ರಾತ್ರಿ ಅವರನ್ನು ವಶಕ್ಕೆ ತೆಗೆದುಕೊಳ್ಳಲು ಸಾಧ್ಯವಾಗಿರಲಿಲ್ಲ.
ಈ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಟಿಡಿಪಿಯ ಕೆಲವು ಕಾರ್ಯಕರ್ತರನ್ನೂ ಬಂಧಿಸಲಾಗಿದೆ ಎಂದು ವರದಿಯಾಗಿದೆ.