ಚನ್ನಪಟ್ಟಣದ ಮಾಜಿ ಶಾಸಕ ಎಂ.ಸಿ. ಅಶ್ವಥ್ ಸೇರಿ 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಸ್ವಕ್ಷೇತ್ರದಲ್ಲೇ ಕುಮಾರಸ್ವಾಮಿ ಅವರಿಗೆ ಆಘಾತ
ಬೆಂಗಳೂರು: ಮಾಜಿ ಶಾಸಕ ಎಂಸಿ ಅಶ್ವಥ್ ಹಾಗೂ ಚನ್ನಪಟ್ಟಣದ 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು.
ಸೋಮವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬರಮಾಡಿಕೊಂಡರು.
ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್, ʼʼಬಿಜೆಪಿ - ಜೆಡಿಎಸ್‌ನ ಮೈತ್ರಿಯನ್ನು ಸಹಿಸಿಕೊಳ್ಳಲು ಆಗದೇ ರಾಜ್ಯದ ವಿವಿಧ ಭಾಗದಿಂದ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು, ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಪ್ರತಿಯೊಂದು ವರ್ಗದ ಕಲ್ಯಾಣಕ್ಕಾಗಿ ಕಾಂಗ್ರೆಸ್ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಜನಪರ ಸರ್ಕಾರದ ಕಾರ್ಯಕ್ರಮಗಳನ್ನು ಮೆಚ್ಚಿ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ನಿಮ್ಮೆಲ್ಲರಿಗೂ ಶುಭವಾಗಲಿʼʼ ಎಂದು ತಿಳಿಸಿದರು.
“ಪೂಜನೀಯ ದೇವೇಗೌಡರೇ, ನಿಮ್ಮ ಸುಪುತ್ರರು ಪದೇ ಪದೆ ಜೆಡಿಎಸ್ ವಿಸರ್ಜನೆ ಮಾಡುತ್ತೇನೆ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರೆ ಪಕ್ಷದ ನಾಯಕರು, ಕಾರ್ಯಕರ್ತರು ಎಲ್ಲಿ ಹೋಗಬೇಕು? ನಿಮ್ಮ ಸುಪುತ್ರರು ದಿನಬೆಳಗಾದರೆ ಸಿದ್ಧಾಂತ ಬದಲಿಸುತ್ತಾರೆ, ಯಾರ ಜೊತೆ ಬೇಕಾದರೂ ಸಂಬಂಧ ಬೆಳೆಸುತ್ತಾರೆ. ಆದರೆ ಸಿದ್ಧಾಂತ ನಂಬಿರುವ ಕಾರ್ಯಕರ್ತರು ಏನಾಗಬೇಕು?” ಎಂದು ಡಿ.ಕೆ. ಶಿವಕುಮಾರ್ ಜೆಡಿಎಸ್ ವರಿಷ್ಠ ದೇವೇಗೌಡರನ್ನು ಪ್ರಶ್ನಿಸಿದ್ದಾರೆ.