ಆಗಸ್ಟ್ 4 ರಿಂದ 15ರವರೆಗೆ ಲಾಲ್ ಭಾಗ್ನಲ್ಲಿ ಫಲಪುಷ್ಪ ಪ್ರದರ್ಶನ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್
ಬೆಂಗಳೂರು, ಆ.1: ಈ ಬಾರಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥ ಸಸ್ಯಕಾಶಿ ಲಾಲ್ ಭಾಗ್ನಲ್ಲಿ ಫಲಪುಷ್ಪ ಪ್ರದರ್ಶನ ಆ.4 ರಿಂದ 15 ರವರೆಗೆ ನಡೆಯಲಿದೆ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ.
ಮಂಗಳವಾರ ನಗರದ ಲಾಲ್‍ಬಾಗ್‍ನ ತೋಟಗಾರಿಕಾ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.4ರಂದು ಸಂಜೆ 6ಕ್ಕೆ ಗಾಜಿನ ಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಪುಷ್ಪ ಪ್ರದರ್ಶನ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ, ಶಾಸಕ ಉದಯ್ ಬಿ.ಗರುಡಾಚಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಜತೆಗೆ ವಿವಿಧ ಕ್ಷೇತ್ರದ ಗಣ್ಯರು ಭಾಗಿಯಾಗಲಿದ್ದಾರೆ ಎಂದರು.
ಈ ಬಾರಿ ಫಲಪುಷ್ಪ ಪ್ರದರ್ಶನದಲ್ಲಿ ಸರಿ ಸುಮಾರು 10 ಲಕ್ಷಕ್ಕೂ ಅಧಿಕ ವೀಕ್ಷಕರು ಆಗಮಿಸುವ ನಿರೀಕ್ಷೆ ಇದೆ. ಲಾಲ್‍ಬಾಗ್‍ನಲ್ಲಿ ಫಲಪುಷ್ಪ ಮಾತ್ರವಲ್ಲದೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಆ.5ರಂದು ಹೈಕೋರ್ಟಿನ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರು ಇಕೆಬಾನ, ತರಕಾರಿ ಕೆತ್ತನೆ, ಪುಷ್ಪಭಾರತಿ, ಬೋನ್ಸಾಯ್, ಡಚ್ ಹೂವಿನ ಜೋಡಣೆ, ಥಾಯ್‍ಆರ್ಟ್, ಜಾನೂರು ಒಣಹೂವಿನ ಜೋಡಣೆಯ ಕಲೆಗಳ ಸ್ಪರ್ಧೆಗಳ ಪ್ರದರ್ಶನವನ್ನು ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಮಾಜಿ ಸಚಿವೆ ಉಮಾಶ್ರೀ ಪಾಲ್ಗೊಳ್ಳಲಿದ್ದಾರೆ ಎಂದು ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.
ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಆ.14ರಂದು ಲಾಲ್‍ಬಾಗ್‍ನಲ್ಲಿಯೇ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾಹಿತಿ ಶೂದ್ರ ಶ್ರೀನಿವಾಸ್, ಜಾನಪದ ತಜ್ಞ ಡಾ. ಕೆ.ಆರ್. ಸಂಧ್ಯಾ ರೆಡ್ಡಿ, ನಟಿ ರಚಿತಾ ರಾಮ್ ಬಹುಮಾನಗಳನ್ನು ವಿತರಿಸಲಿದ್ದಾರೆ ಎಂದು ಎಸ್.ಎಸ್.ಮಲ್ಲಿಕಾರ್ಜುನ್ ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ತೋಟಗಾರಿಕೆ ಉಪ ನಿರ್ದೇಶಕಿ ಕುಸುಮಾ, ಜಂಟಿ ನಿರ್ದೇಶಕ ಡಾ.ಎಂ.ಜಗದೀಶ್, ನಿರ್ದೇಶಕ ಡಿ.ಎಸ್.ರಮೇಶ್ ಸೇರಿದಂತೆ ಹಲವರು ಇದ್ದರು.