ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿರುವ ವಿಚಾರ ನನಗೆ ಗೊತ್ತಿಲ್ಲ : ಜಿ.ಪರಮೇಶ್ವರ್
ಡಾ.ಜಿ.ಪರಮೇಶ್ವರ್
ಬೆಂಗಳೂರು: ''ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿರುವ ವಿಚಾರ ನನಗೆ ಗೊತ್ತಿಲ್ಲ. ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು?. ಅವರಿಬ್ಬರೇ ರಾಜಕಾರಣ ನಡೆಸಲಿ. ಬೇರೆಯವರು ಇರುವುದೇ ಬೇಡವೇ?. ಆ ರೀತಿ ಒಪ್ಪಂದ ಆಗಿರಲು ಸಾಧ್ಯವಿಲ್ಲ'' ಎಂದು ಗೃಹಸಚಿವ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಗುರುವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆ ಒಪ್ಪಂದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ʼಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಅಂತಹ ಒಪ್ಪಂದ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ. ಈಗ ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕುʼ ಎಂದು ಪ್ರಶ್ನಿಸಿದರು.
ʼಅವರಿಬ್ಬರೇ ರಾಜಕಾರಣ ನಡೆಸಲಿ. ಬೇರೆಯವರು ಇರುವುದೇ ಬೇಡವೇ? ಆ ರೀತಿ ಒಪ್ಪಂದ ಆಗಿರಲು ಸಾಧ್ಯವಿಲ್ಲ. ಆದ್ದರಿಂದ ಹೈಕಮಾಂಡ್ ಅಂತಿಮವಾಗಿ ಏನು ತೀರ್ಮಾನ ಮಾಡುತ್ತದೆ ಅದಕ್ಕೆ ನಾವು ಬದ್ಧವಾಗಿರುತ್ತೇವೆ. ನಾವ್ಯಾರು ಕೂಡ ಹೈಕಮಾಂಡ್ ಅನ್ನು ಬಿಟ್ಟು ಹೋದವರಲ್ಲ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆ ಅದನ್ನು ಒಪ್ಪಿಕೊಳ್ಳುತ್ತೇವೆʼ ಎಂದು ತಿಳಿಸಿದರು.
ಯಾವುದೇ ಗೊಂದಲಗಳು ಇಲ್ಲ :
ಕೆಪಿಸಿಸಿ ಮತ್ತು ಸ್ವಾಭಿಮಾನಿಗಳ ಒಕ್ಕೂಟ ಒಟ್ಟಾಗಿ ಸಮಾವೇಶ ಮಾಡುತ್ತಿದ್ದು, ಯಾವುದೇ ಗೊಂದಲಗಳು ಇಲ್ಲ. ಕಾಂಗ್ರೆಸ್ ಪಕ್ಷ ಮತ್ತು ಸರಕಾರದ ಮೇಲೆ ಸ್ವಾಭಿಮಾನಿ ಒಕ್ಕೂಟಕ್ಕೆ ಸಹಾನುಭೂತಿ ಇದೆ. ಹೀಗಾಗಿ ಒಟ್ಟಿಗೆ ಸಮಾವೇಶ ಮಾಡುತ್ತಿದ್ದು, ಇದರಲ್ಲಿ ಯಾವುದೇ ಗೊಂದಲವಿಲ್ಲ. ಗೊಂದಲ ಇದೆ ಎಂಬಂತೆ ಅವರಿರವರು ಸೃಷ್ಟಿ ಮಾಡುತ್ತಿದ್ದಾರೆ ಎಂದು ಹೇಳಿದರು.
ನಾವು ರಾಜ್ಯದ ಜನತೆಗೆ ಚುನಾವಣೆಯ ಸಂದರ್ಭದಲ್ಲಿ ರಾಜಕೀಯವಾಗಿ ಏನೆಲ್ಲ ಮಾತನಾಡಿದ್ದೇವೆ, ಅದೆಲ್ಲವನ್ನು ನಾವು ಜನಗಳಿಗೆ ಹೇಳಬೇಕು. ಸರಕಾರದ ಕಾರ್ಯಕ್ರಮಗಳಲ್ಲಿ ಅನೇಕ ರಾಜಕೀಯ ವಿಚಾರಗಳನ್ನು ಪ್ರಸ್ತಾಪ ಮಾಡಲು ಆಗುವುದಿಲ್ಲ. ಅದಕ್ಕಾಗಿ ಈ ಸಮಾವೇಶದಲ್ಲಿ ರಾಜಕೀಯ ವಿಚಾರಗಳನ್ನು ಪ್ರಸ್ತಾಪ ಮಾಡುತ್ತೇವೆ. ಜನಗಳಿಗೆ ಸತ್ಯಾಂಶ ಗೊತ್ತಾಗಬೇಕು. ಅನೇಕ ವಿಚಾರದಲ್ಲಿ ವಿರೋಧ ಪಕ್ಷದವರು ಮಾಡುವ ಆಪಾದನೆಗಳಿಗೆ ರಾಜಕೀಯವಾಗಿ ಉತ್ತರ ಕೊಡುತ್ತೇವೆ ಎಂದು ಹೇಳಿದರು.