ಮತ್ತೆ ಎರಡು ವಿಧೇಯಕಗಳಿಗೆ ಅಂಕಿತ ಹಾಕದೆ ವಾಪಸ್ ಕಳುಹಿಸಿದ ರಾಜ್ಯಪಾಲರು

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಬೆಂಗಳೂರು : ರಾಜ್ಯ ಸರಕಾರ ಹಾಗೂ ರಾಜ್ಯಪಾಲರ ನಡುವಿನ ಶೀತಲ ಸಮರ ಮುಂದುವರೆದಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮತ್ತೆ ಎರಡು ವಿಧೇಯಕಗಳಿಗೆ ಸಹಿ ಹಾಕದೆ ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತೀಚಿಗಷ್ಟೇ ‘ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ’ಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳಿಸಿದ್ದರು. ಇದೀಗ ಮತ್ತೆರಡು ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದಾರೆ.
ಕರ್ನಾಟಕ ಸಹಕಾರಿ ಸಂಘಗಳ ತಿದ್ದುಪಡಿ ವಿಧೇಯಕ 2024 ಮತ್ತು ಕರ್ನಾಟಕ ಸೌಹಾರ್ದ ಸರಕಾರಿ ತಿದ್ದುಪಡಿ ವಿಧೇಯಕ 2024 ಈ ಎರಡು ಮಸೂದೆಗಳ ಬಗ್ಗೆ ರಾಜ್ಯಪಾಲರು ಸ್ಪಷ್ಟನೆಯನ್ನು ಕೇಳಿ ಸರಕಾರಕ್ಕೆ ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
ʼಕರ್ನಾಟಕ ಸಹಕಾರಿ ಸಂಘಗಳ ತಿದ್ದುಪಡಿ ಮಸೂದೆʼಗೆ ಸಹಕಾರಿ ಸಂಘಗಳಿಗೆ ಮೀಸಲಾತಿ ಆಧಾರದ ಮೇಲೆ ನಾಮನಿರ್ದೇಶನ ಮಾಡುವ ಬಗ್ಗೆ ಸರಕಾರವು ತಿದ್ದುಪಡಿ ಮಾಡಿತ್ತು. ಆದರೆ ಈ ತಿದ್ದುಪಡಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಕ್ಷೇಪಿಸಿದ್ದಾರೆ.
ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕದಲ್ಲಿ ಸಹಕಾರಿ ಚುನಾವಣಾ ಪ್ರಾಧಿಕಾರ ರದ್ದುಗೊಳಿಸುವ ಉಲ್ಲೇಖವಿದೆ. ಇದನ್ನು ರಾಜ್ಯಪಾಲರು ಪ್ರಶ್ನೆ ಮಾಡಿದ್ದಾರೆ. ಆರ್ಥಿಕ ಹೊರೆಯ ಕಾರಣದಿಂದಾಗಿ ಸಹಕಾರಿ ಚುನಾವಣಾ ಪ್ರಾಧಿಕಾರಗಳನ್ನು ರದ್ದುಗೊಳಿಸುವ ಪ್ರಸ್ತಾಪವು ಒಳ್ಳೆಯದಲ್ಲ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟಿದ್ದಾರೆ.