ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ: "ಗಾಂಧಿ ಭಾರತ" ಹೆಸರಲ್ಲಿ ವರ್ಷವಿಡೀ ಕಾರ್ಯಕ್ರಮಕ್ಕೆ ಸರಕಾರ ನಿರ್ಧಾರ
ಬೆಂಗಳೂರು : 1924ರಲ್ಲಿ ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿ ಭಾಗವಹಿಸಿ ಈಗ 100 ವರ್ಷಗಳು ತುಂಬುತ್ತಿದ್ದು, ಈ ಶತಮಾನೋತ್ಸವ ಅಂಗವಾಗಿ ವರ್ಷವಿಡೀ ‘ಗಾಂಧಿ ಭಾರತ’ ಹೆಸರಿನಲ್ಲಿ ವಿವಿಧ ಕಾರ್ಯಕ್ರಮಗಳ ಆಯೋಜನೆಗೆ ರಾಜ್ಯ ಸರಕಾರ ನಿರ್ಧಾರ ಮಾಡಿದೆ.
1924ರಲ್ಲಿ ಮಹಾತ್ಮಗಾಂಧಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಗೆ ಸಿದ್ದತಾ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ನಡೆಯಿತು.
ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿ.26, 27ರಂದು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು. ಶತಮಾನೋತ್ಸವ ಅಂಗವಾಗಿ ವರ್ಷವಿಡೀ ʻಗಾಂಧೀ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳ ಆಯೋಜನೆಗೆ ಸಿದ್ಧತೆಗಳನ್ನು ಆರಂಭಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ಬೆಳಗಾವಿಯಲ್ಲಿ ಡಿ.26ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮತ್ತು ಡಿ.27ರಂದು ಸಾರ್ವಜನಿಕ ಸಭೆ ನಡೆಸಲು ನಿರ್ಧರಿಸಲಾಗಿದೆ. ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ನಗರದ ಪ್ರಮುಖ 32 ಕಿಮೀ ಉದ್ದದ ರಸ್ತೆ ಹಾಗೂ 30 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ವರ್ಷವಿಡೀ ಎಲ್ಲಾ ಶಾಲೆಗಳಲ್ಲಿ ʻಗಾಂಧಿ ಭಾರತʼ ಅಡಿಯಲ್ಲಿ ʻನಾವು ಮನುಜರುʼ ಕಾರ್ಯಕ್ರಮಗಳ ಆಯೋಜನೆ. ಮಕ್ಕಳಲ್ಲಿ ಗಾಂಧೀಜಿ ವಿಚಾರಧಾರೆ ಬಗ್ಗೆ ಅರಿವು ಮೂಡಿಸಲು ವಿವಿಧ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ ಮಾಡಲು ಸೂಚಿಸಲಾಗಿದೆ. ಶತಮಾನೋತ್ಸವದ ನೆನಪಿಗೆ ವಿಶೇಷ ಅಂಚೆ ಚೀಟಿ ಬಿಡುಗಡೆಗೆ ನಿರ್ಧಾರ ಮಾಡಲಾಯಿತು.
ಬೆಳಗಾವಿಯ 2.1 ಕಿ.ಮೀ ಉದ್ದದ ಕಾಂಗ್ರೆಸ್ ರಸ್ತೆಯಲ್ಲಿ ಶತಮಾನೋತ್ಸವದ ಸ್ಮಾರಕವಾಗಿ ತಾತ್ಕಾಲಿಕ ವಿರೂಪಾಕ್ಷ ಗೋಪುರ ನಿರ್ಮಾಣ, ರೈಲು ಮಾರ್ಗದ ತಡೆಗೋಡೆಯುದ್ದಕ್ಕೂ ಉಬ್ಬು ಶಿಲ್ಪಗಳ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ. ಕಾಂಗ್ರೆಸ್ ಅಧಿವೇಶನ ನಡೆದ ಸ್ಥಳದಲ್ಲಿ ವೀರಸೌಧ ಅಭಿವೃದ್ಧಿ. ಈ ಸ್ಥಳದಲ್ಲಿ ಗ್ರಂಥಾಲಯ ಮತ್ತು ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು.
ಹುದಲಿಯಲ್ಲಿ ಗಾಂಧೀ ಸ್ಮಾರಕ ಹಾಗೂ ಛಾಯಾಚಿತ್ರ ಗ್ಯಾಲರಿಯ ಅಭಿವೃದ್ಧಿ ಮಾಡಲಾಗುವುದು. ಗಾಂಧೀಜಿ ಅವರು ವಿವಿಧ ಕಾಲಘಟ್ಟಗಳಲ್ಲಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳಲ್ಲಿ ನೆನಪಿನ ಸ್ತಂಭಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ.