ಸಿಸಿಬಿ ಸದೃಢಗೊಳಿಸಲು ಸರಕಾರ ಸಜ್ಜು: 230 ಸಿಬ್ಬಂದಿ ನೇಮಕಕ್ಕೆ ಒಪ್ಪಿಗೆ
ಬೆಂಗಳೂರು: ʼʼಸಿಸಿಬಿ ಯನ್ನು ಇನ್ನಷ್ಟು ಸದೃಢಗೊಳಿಸಲು 230 ಸಿಬ್ಬಂದಿಯನ್ನು ಹೊಸದಾಗಿ ನೇಮಿಸಿಕೊಳ್ಳಲು ಒಪ್ಪಿಗೆ ನೀಡಲಾಗಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶುಕ್ರವಾರ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಪಾಲ್ಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
ʼʼಸಿಸಿಬಿ ಸಿಬ್ಬಂದಿಗೆ ಅಗತ್ಯವಿದ್ದರೆ ಹೊಸ ಕಟ್ಟಡಗಳನ್ನು ಒದಗಿಸಲಾಗುವುದುʼʼ ಎಂದು ಅವರು ತಿಳಿಸಿದರು.
ʼʼಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್.ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ನಮ್ಮ ಸರ್ಕಾರ ಕೇವಲ ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಕೈತೊಳೆದುಕೊಳ್ಳುವುದಿಲ್ಲ, ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆʼʼ ಎಂದು ಎಚ್ಚರಿಕೆ ನೀಡಿದ್ದಾರೆ.
ʼʼಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್.ಐ.ಆರ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರು ಕೊಡುವವರು ಬರಲಿ ಎಂದು ಕಾಯುತ್ತಾ ಕೂರಬಾರದುʼʼ ಎಂದು ಅವರು ಸೂಚನೆ ನೀಡಿದರು.
ʼʼಹಿರಿಯ ಅಧಿಕಾರಿಗಳು ಜನ ಸಂಪರ್ಕಕ್ಕೆ ಸಿಗದೇ ಹೋದರೆ , ಜನಸ್ನೇಹಿ ಆಗದೇ ಹೋದರೆ ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಠಾಣೆಗೆ ಬರುವ ಬಡವರು, ಜನಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಬಗ್ಗೆ ಭರವಸೆ ಹುಟ್ಟುವ ರೀತಿಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಬೇಕುʼʼ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.