ಸೈಬರ್ ಅಪರಾಧ ತಗ್ಗಿಸಲು ಹೊಸ ಕಾಯ್ದೆಗೆ ಚಿಂತನೆ : ಗೃಹ ಸಚಿವ ಜಿ.ಪರಮೇಶ್ವರ್
‘ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ’

ಬೆಂಗಳೂರು: ರಾಜ್ಯದಲ್ಲಿ ಅತ್ಯಾಚಾರ, ಕೊಲೆ, ಪೋಕ್ಸೊನಂತಹ ಪ್ರಕರಣಗಳು ಕಡಿಮೆ ಆಗುತ್ತಿದೆ. ಆದರೆ, ಸೈಬರ್ ಅಪರಾಧಗಳು ಕಡಿಮೆಯಾಗಿಲ್ಲ. ಇದಕ್ಕೆ ಕೇಂದ್ರ ಸರಕಾರವು ನೂತನ ಕಾಯ್ದೆಯನ್ನು ಮಾಡಬೇಕು. ಈ ಬಗ್ಗೆ ನಮ್ಮ ಸರಕಾರವು ನೂತನ ಕಾಯ್ದೆ ಮಾಡಲು ಮುಂದಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಗುರುವಾರ ಪರಿಷತ್‍ನಲ್ಲಿ ಬಿಜೆಪಿ ಸದಸ್ಯ ನವೀನ್ ಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, ಸೈಬರ್ ಅಪರಾಧ ತಗ್ಗಿಸಲು ಯಾವ ಕಾನೂನು ಅಗತ್ಯ ಎಂದು ಚರ್ಚೆ ಮಾಡುತ್ತೇವೆ ಎಂದರು.
ರಾಜ್ಯದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಟ್ಟು ನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಿದ್ದೇವೆ ಎಂದು ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಹಿಂದಿನ ಒಂದು ವರ್ಷದ ಅವಧಿಯಲ್ಲಿ 22 ಸಾವಿರ ಸೈಬರ್ ಪ್ರಕರಣಗಳು ದಾಖಲಾಗಿವೆ. ಇದರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜನ ಜಾಗೃತ ಕಾರ್ಯಕ್ರಮಗಳು ನಡೆಯುತ್ತಲೇ ಇದ್ದರೂ, ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಎಂದರು.
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಾಕುವವರ ವಿರುದ್ಧ ಸುಮೋಟೊ ದೂರು ದಾಖಲಿಸಿಕೊಳ್ಳಲಾಗುತ್ತದೆ. 2023ರಲ್ಲಿ 228, 2024ರಲ್ಲಿ 338, 2025ರಲ್ಲಿ ಇಲ್ಲಿಯವರೆಗೆ 68 ಸುಮೋಟೊ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಡಾ.ಜಿ.ಪರಮೇಶ್ವರ್ ವಿವರಣೆ ನೀಡಿದರು.