ಕಾಂಗ್ರೆಸ್ ಸರಕಾರ ಇರುವವರೆಗೂ ಗ್ಯಾರಂಟಿಗಳು ನಿಲ್ಲಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಇವುಗಳು ನಿರಂತರವಾಗಿ ನಡೆಯಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
ಗುರುವಾರ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಕೋಟೆ ಮೈದಾನದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜಕೀಯ ಲಾಭಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಬಡ ಜನರ ಸಬಲೀಕರಣಕ್ಕಾಗಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.
ಕಾಂಗ್ರೆಸ್ ಅಂದರೆ ಬದ್ಧತೆ, ಬದ್ಧತೆ ಅಂದರೆ ಕಾಂಗ್ರೆಸ್. ನಮ್ಮದು ನುಡಿದಂತೆ ನಡೆದ ಸರಕಾರ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸರಕಾರ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ. ಅಧಿಕಾರಕ್ಕೆ ಬಂದ ಕೇವಲ ಆರು ತಿಂಗಳಲ್ಲಿ ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ನಮ್ಮ ಸರಕಾರ ಬಂದ ಮರು ಕ್ಷಣದಿಂದಲೇ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸಬೇಕು, ಎಷ್ಟು ಜನರಿಗೆ ನಮ್ಮ ಗ್ಯಾರಂಟಿ ಯೋಜನೆ ತಲುಪಿದೆ ಎನ್ನುವುದನ್ನು ತಿಳಿದುಕೊಳ್ಳಬೇಕು ಎನ್ನುವ ಉದ್ದೇಶದಿಂದ ಎಲ್ಲ ಕಡೆ ಗ್ಯಾರಂಟಿ ಸಮಾವೇಶಗಳನ್ನು ಆಯೋಜಿಸುತ್ತಿದ್ದೇವೆ. ಡಿಮೊನಿಟೈಜೇಶನ್, ಕೊರೋನ, ಪ್ರವಾಹ, ಬೆಲೆ ಏರಿಕೆ ಎಲ್ಲದರಿಂದಾಗಿ ತತ್ತರಿಸಿರುವ ಜನರ ಬವಣೆಯನ್ನು ನೋಡಿ, ಜನರು ಉಸಿರಾಡಲು ಅವಕಾಶ ಮಾಡಿಕೊಡೋಣ ಎಂದು ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಸ್ಥಿತಿ ಮತ್ತಷ್ಟು ಸುಧಾರಿಸಿದೆ. ಜನರ ಜೀವನ ಮಟ್ಟ ಮೇಲಕ್ಕೇರಿದೆ ಎಂದು ಸಮೀಕ್ಷೆಗಳಿಂದ ತಿಳಿದುಬಂದಿದೆ. ನಮ್ಮ ಗ್ಯಾರಂಟಿ ಯೋಜನೆಗಳ ಅಡಿಯಲ್ಲಿ ಪ್ರತಿ ತಿಂಗಳು ಸರಾಸರಿ ನಾಲ್ಕೂವರೆ ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗುತ್ತಿದೆ. ವರ್ಷಕ್ಕೆ 54 ಸಾವಿರ ಕೋಟಿ ರೂ.ಗಳನ್ನು ನಾವು ಜನರಿಗಾಗಿ ನೇರವಾಗಿ ಬಿಡುಗಡೆ ಮಾಡುತ್ತಿದ್ದೇವೆ. ಕೇವಲ ನನ್ನ ಇಲಾಖೆಯ ಗೃಹಲಕ್ಷ್ಮಿ ಯೋಜನೆಗೆ ವರ್ಷಕ್ಕೆ 28ಸಾವಿರ ಕೋಟಿ ರೂ.ಒದಗಿಸಲಾಗಿದೆ ಎಂದು ಹೆಬ್ಬಾಳ್ಕರ್ ಹೇಳಿದರು.