ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು : ಎಚ್.ಡಿ.ಕುಮಾರಸ್ವಾಮಿ
ಮೈಸೂರು : ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಹಗರಣ ಇದೀಗ ತೀವ್ರ ಸ್ವರೂಪ ಪಡೆಯುತ್ತಿದ್ದು, ರಾಜ್ಯ ಸರಕಾರದವನ್ನು ವಿಪಕ್ಷಗಳು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, " ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲಾಗಿದೆ" ಎಂದು ಹೇಳಿದ್ದಾರೆ.
ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಸಿಡಿ ಫ್ಯಾಕ್ಟರಿ ಈಗ ಬಂದ್ ಆಗಿದೆ. ಮುಡಾ ಫ್ಯಾಕ್ಟರಿ ಶುರುವಾಗಿದೆ. ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಏಕೆ?. ಇದರ ಹಿಂದೆ ಸಿಎಂ ಕುರ್ಚಿ ಮೇಲೆ ಟವೆಲ್ ಹಾಕಿರುವವರ ಪಾತ್ರ ಇದೆ ಎಂದು ಎಂದು ಪರೋಕ್ಷವಾಗಿ ಉಪಮುಖ್ಯಮಂತ್ರಿ ಡಿಕೆಶಿ ವಿರುದ್ಧ ಎಚ್‌ಡಿಕೆ ಆರೋಪಿಸಿದರು.
ಮುಖ್ಯಮಂತ್ರಿ ಪತ್ನಿಗೆ ಸೈಟ್ ಹಂಚಿಕೆ ಸಂಬಂಧ ಮುಖ್ಯಮಂತ್ರಿಯ ಕಾನೂನು ಸಲಹೆಗಾರರೂ ಆಗಿರುವ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿದ್ದಾರೆ. ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ಅಲ್ಲದೆ, 62 ಕೋಟಿ ರೂ. ಪರಿಹಾರ ನೀಡಬೇಕು ಎಂದಿದ್ದಾರೆ. ಆದರೆ ಹಲವು ಅಭಿವೃದ್ಧಿ ಹೆಸರಿನಲ್ಲಿ ಭೂ ಸ್ವಾಧೀನವಾಗಿದೆ, ಆ ರೈತರು ಇನ್ನು ಕೂಡ ಬೀದಿಯಲ್ಲಿ ಅಲೆದಾಡುತ್ತಿದ್ದಾರೆ. ಅವರಿಗೆ ರೇಟ್ ಫಿಕ್ಸ್ ಮಾಡುವಾಗ ಹೇಗೆ ಮಾಡುತ್ತೀರಾ? ಎಂದು ಪ್ರಶ್ನಿಸಿದರು.