ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಮತ್ತವರ ಕುಟುಂಬದ ಪಾತ್ರವಿದೆ : ಎಚ್.ಡಿ.ಕುಮಾರಸ್ವಾಮಿ
ಎಚ್.ಡಿ.ಕುಮಾರಸ್ವಾಮಿ(PTI)
ಬೆಂಗಳೂರು : ಮುಡಾ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನಡುವಣ ವಾಕ್ಸಮರ ತಾರಕಕ್ಕೇರಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ತಮ್ಮ ಎಕ್ಸ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಎಚ್ಡಿಕೆ, ದಾಖಲೆಯೊಂದನ್ನು ಪೋಸ್ಟ್ ಮಾಡಿ ತಿರುಗೇಟು ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ.. ಮುಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ ಎಂದು ದಾಖಲೆಯೊಂದನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
"50:50ರ ಅನುಪಾತದಲ್ಲಿಯೇ ಮುಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ 'ಒತ್ತಾಯ' ಮಾಡಿದ್ದಾರೆ!!" ಹಾಗೂ "ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ." ಇದು ಮುಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.
ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..? ಸೂಪರ್ ಸಿಎಂ ಅವರೇ 'ಒತ್ತಾಯಿಸಿರುತ್ತಾರೆ!!!' ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ. ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಅಥವಾ ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಎಂದು ಅವರು ಸಿಎಂಗೆ ತಿರುಗೇಟು ನೀಡಿದ್ದಾರೆ.