ಮೋದಿ ಮಾತು ಕೇಳಿದ್ದರೆ 5 ವರ್ಷವೂ ನಾನೇ ಸಿಎಂ ಆಗಿರುತ್ತಿದ್ದೆ: ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಮಾತು ಕೇಳಿ ತೀರ್ಮಾನ ಮಾಡಿದ್ದರೆ ಕಳೆದ ಐದು ವರ್ಷಗಳ ಪೂರ್ಣ ಅವಧಿಗೆ ನಾನೇ ಸಿಎಂ ಆಗಿರುತ್ತಿದ್ದೆ'' ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಗುರುವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಆಪರೇಷನ್ ಕಮಲದ ಪ್ರಸ್ತಾಪವಾಯಿತು. ಅಷ್ಟರಲ್ಲಿ ಮಧ್ಯಪ್ರವೇಶ ಮಾಡಿ ಮಾತನಾಡಿದ ಕುಮಾರಸ್ವಾಮಿ, ಆಪರೇಷನ್ ಕಮಲ ಎಂಬುದು ಇತ್ತು. ಆದರೆ ಮಾಧ್ಯಮಗಳಲ್ಲಿ ಕಳೆದ ಕೆಲವು ದಿನಗಳಿಂದ ಆಪರೇಷನ್ ಹಸ್ತ ಎಂಬ ಸುದ್ದಿ ಬರುತ್ತಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಏಕೆ ಅವರ ಜೊತೆ ಸೇರಿಕೊಂಡಿದ್ದೀರಿ? ಎಂದು ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದರು.
ಸಿಎಂಗೆ ಉತ್ತರಿಸಿದ ಕುಮಾರಸ್ವಾಮಿ, ''ಕಾಂಗ್ರೆಸ್ ಜೊತೆಗೆ ಸಮ್ಮಿಶ್ರ ಸರಕಾರ ನಡೆಸುತ್ತಿದ್ದ ಸಂದರ್ಭದಲ್ಲಿ 2019ರ ಲೋಕಸಭಾ ಚುನಾವಣೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಕರೆದು ಒಂದೂವರೆ ಗಂಟೆಗಳ ಕಾಲ ಚರ್ಚಿಸಿದ್ದರು. ಮುಂದಿನ ನಾಲ್ಕು ವರ್ಷ ಯಾವುದೇ ಸಮಸ್ಯೆ ಇರೊಲ್ಲ, ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ ಎಂದು ಆಹ್ವಾನ ನೀಡಿದ್ದರು. ಆದರೆ ನಾನು ಅದನ್ನು ತಿರಸ್ಕಾರ ಮಾಡಿದೆ. ಕಪ್ಪು ಚುಕ್ಕೆ ಬರಬಾರದು ಎಂಬ ಕಾರಣಕ್ಕಾಗಿ ಮುಂದುವರಿದೆ'' ಎಂದು ಕುಮಾರಸ್ವಾಮಿ ಹೇಳಿದರು.